ಕುಶಾಲನಗರ, ಮಾ.೧೧ ಕುಶಾಲನಗರ ತಾಲೂಕು ವಾಲ್ನೂರು ತ್ಯಾಗತೂರು ಗ್ರಾಮದಲ್ಲಿ ತಾ. ೧೨ರಂದು (ಇಂದು) ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚುರಂಜನ್ ಚಾಲನೆ ನೀಡಲಿದ್ದಾರೆ. ಶಾಸಕರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ ೧ ಗಂಟೆಗೆ ವಾಲ್ನೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ಇರುವ ಅರಳಿಕಟ್ಟೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಯೋಜನೆ ಇದಾಗಿದೆ.