ವರದಿ: ಚಂದ್ರಮೋಹನ್
ಕುಶಾಲನಗರ, ಮಾ. ೧೩: ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಉಂಟುಮಾಡುತ್ತಿದ್ದ ಜೀವನದಿ ಕಾವೇರಿಯಲ್ಲಿ ಇದೀಗ ಮಾರ್ಚ್ ಆರಂಭದಲ್ಲೇ ನೀರಿನ ಹರಿವಿನ ಪ್ರಮಾಣ ಬಹುತೇಕ ಕ್ಷೀಣಗೊಳ್ಳುತ್ತಿರುವುದು ಕಂಡುಬAದಿದೆ. ಇದೇ ರೀತಿ ಮುಂದುವರಿದಲ್ಲಿ ಒಂದು ವಾರದ ಅವಧಿಯಲ್ಲಿ ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ನಾಗರಿಕರಿಗೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಅಧಿಕವಾಗಿದೆ.
ವರ್ಷದ ನಾಲ್ಕು ತಿಂಗಳು ತುಂಬಿ ಹರಿಯುತ್ತಿರುವ ಕಾವೇರಿಯಲ್ಲಿ ಇದೀಗ ನೀರಿನ ಹರಿವಿನ ಕೊರತೆ ಎದ್ದು ಕಾಣುತ್ತಿದೆ. ಈ ಸಾಲಿನಲ್ಲಿ ನಿರಂತರವಾಗಿ ಮಳೆ ಸುರಿದರೂ ಕಾವೇರಿ ನದಿ ಜಲಮೂಲಗಳು ಅಲ್ಲಲ್ಲಿ ಬತ್ತಿಹೋಗಿರುವ ದೃಶ್ಯ ಗೋಚರಿಸುತ್ತಿದೆ. ಕಳೆದ ಕೆಲವು ದಿನಗಳಿಂದ ಮೂಲ ಕಾವೇರಿಯಿಂದ ಕುಶಾಲನಗರ ತನಕ ಕೃಷಿಕರು ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಅವಶ್ಯವಿರುವ ನೀರಿಗಾಗಿ ಮೋಟಾರ್ ಪಂಪುಗಳನ್ನು ಅಳವಡಿಸಿರುವುದನ್ನು ಕಾಣಬಹುದು. ಇದರಿಂದ ನದಿಯಲ್ಲಿ ನೀರಿನ ಹರಿವು ಅಲ್ಲಲ್ಲಿ ಸ್ಥಗಿತಗೊಂಡಿದೆ. ಇದರಿಂದ ನದಿಯಲ್ಲಿ ನೀರಿನ ಕೊರತೆ ಉಂಟಾಗಿದೆ ಎನ್ನುವುದು ಜನರ ಅಭಿಪ್ರಾಯ.
ಕುಶಾಲನಗರ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಪಟ್ಟಣಕ್ಕೆ ದಿನನಿತ್ಯ ೩೫ ಲಕ್ಷ ಲೀಟರ್ ನೀರಿನ ಅಗತ್ಯವಿದ್ದು ಜಲಮಂಡಳಿ ಮೂಲಕ ಕೇವಲ ೨೮ ಲಕ್ಷ ಲೀಟರ್ ನೀರನ್ನು ಒದಗಿಸಲಾಗುತ್ತಿದೆ ಎಂದು ಜಲಮಂಡಳಿಯ ಅಧಿಕಾರಿ ಆನಂದ್ ‘ಶಕ್ತಿ’ಗೆ ಮಾಹಿತಿ ನೀಡಿದ್ದಾರೆ.
ಪ್ರತಿಯೊಬ್ಬ ನಾಗರಿಕನಿಗೆ ದಿನನಿತ್ಯ ೧೩೫ ಲೀಟರ್ ನೀರು ಅವಶ್ಯಕತೆಯಿದ್ದು ಇದನ್ನು ಪೂರೈಸಲು ಪ್ರಸಕ್ತ ಸ್ಥಿತಿಯಲ್ಲಿ ಆಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ನೀರು ಪೋಲಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸ ಬೇಕಾಗಿದೆ ಎಂದು ಅವರು ಕಿವಿಮಾತು ಹೇಳಿದ್ದಾರೆ.
ಪಟ್ಟಣದಲ್ಲಿ ನೀರಿನ ಕೊರತೆ ಕಂಡುಬAದಾಗ ಬದಲಿ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಪಟ್ಟಣದಲ್ಲಿರುವ ಕೊಳವೆಬಾವಿಗಳನ್ನು ಸುಸ್ಥಿತಿಯಲ್ಲಿ ಇಡುವ ಮೂಲಕ ಅವುಗಳಿಂದ ನೀರು ಪೂರೈಕೆಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ (ಮೊದಲ ಪುಟದಿಂದ) ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಹರಿವು ಸಂಪೂರ್ಣ ಸ್ಥಗಿತಗೊಂಡ ಸಂದರ್ಭ ಚಿಕ್ಲಿಹೊಳೆ ಜಲಾಶಯದಿಂದ ಕಾವೇರಿಗೆ ನೀರು ಹರಿಸಿ ಪಟ್ಟಣದ ಜನತೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಚಿಂತನೆ ಹರಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈವರ್ಧನ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಜಲಮಂಡಳಿ ಮೂಲಕ ಕುಶಾಲನಗರ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಅಂದಾಜು ೨೫ ಸಾವಿರ ಜನರಿಗೆ ಕುಡಿಯುವ ನೀರಿನ ಸರಬರಾಜು ಮಾಡುತ್ತಿದ್ದು, ಮೂರು ದಿನಕ್ಕೊಮ್ಮೆ ಎರಡು ಗಂಟೆಗಳ ಕಾಲ ನೀರು ಒದಗಿಸಲಾಗುತ್ತಿದೆ. ಕುಶಾಲನಗರ ಪಟ್ಟಣ ಮತ್ತು ಮುಳ್ಳುಸೋಗೆ ವ್ಯಾಪ್ತಿಯ ಜನತೆಗೆ ಸರಕಾರದಿಂದ ೨೪x೭ ಅವಧಿ ನೀರು ಸರಬರಾಜು ಯೋಜನೆ ಕಳೆದ ಕೆಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಅದರ ಅನುಷ್ಠಾನವಾಗುವ ತನಕ ಪಟ್ಟಣದ ಜನತೆ ಕುಡಿಯುವ ನೀರಿನ ಸಮಸ್ಯೆ ಎದುರಿಸಬೇಕಾಗುವುದು ಖಚಿತವಾಗಿದೆ. ಇತ್ತ ಹಾರಂಗಿ ಜಲಾಶಯದಿಂದ ಕುಶಾಲನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ರಾಜ್ಯ ಸರ್ಕಾರದ ೮೫ ಕೋಟಿ ರೂ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ಇನ್ನೂ ದೊರೆತಿಲ್ಲ.
ಪ್ರಸಕ್ತ ಬೈಚನಹಳ್ಳಿ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಬಂಡ್ ನಿರ್ಮಿಸುವ ಮೂಲಕ ಪಂಪ್ ಹೌಸ್‌ಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧಿಕಾರಿ ಅನಂದ್ ತಿಳಿಸಿದ್ದಾರೆ. ಈ ಮೂಲಕ ಕುಶಾಲನಗರ ಮತ್ತು ಪಿರಿಯಾಪಟ್ಟಣ ಪಂಪ್ ಹೌಸ್‌ಗೆ ನೀರು ಹರಿಸಲು ತಾತ್ಕಾಲಿಕ ಕ್ರಮ ಕೈಗೊಳ್ಳಲಾಗುತ್ತಿದೆ.