ಸಿದ್ದಾಪುರ, ಮಾ. ೧೩: ಅಮ್ಮತ್ತಿ ಗ್ರಾ.ಪಂ. ವ್ಯಾಪ್ತಿಗೆ ಒಳಪಡುವ ಇಂಜಿಲಗೆರೆ ಪುಲಿಯೇರಿ ಗ್ರಾಮದಲ್ಲಿ ರೂ. ೧೫ ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿದ ವಿವಿಧ ರಸ್ತೆಗಳನ್ನು ಶಾಸಕ ಕೆ.ಜಿ. ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬೋಪಯ್ಯ, ಅಮ್ಮತ್ತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮಳೆಹಾನಿ ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿಯಲ್ಲಿ ರೂ. ೧ ಕೋಟಿ ೨೦ ಲಕ್ಷ ಅನುದಾನವನ್ನು ನೀಡಲಾಗಿದೆ ಎಂದರು. ಈಗಾಗಲೇ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು, ಮತ್ತಷ್ಟು ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಕಳೆದೆರಡು ವರ್ಷಗಳಿಂದ ರಾಜ್ಯದಲ್ಲಿ ಕೊರೊನಾ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮಾಡಲು ಸಾಧ್ಯವಾಗಲಿಲ್ಲ. ಇದೀಗ ಸರ್ಕಾರವು ಪ್ರತಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಅನುದಾನವನ್ನು ಬಿಡುಗಡೆಗೊಳಿಸುತ್ತಿದೆ ಎಂದರು. ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ ಕಾಮಗಾರಿಗಳು ನಡೆಯುವ ಸಂದರ್ಭ ಕಳಪೆ ಗುಣಮಟ್ಟದಲ್ಲಿ ಕಾಮಗಾರಿಗಳು ನಡೆಯದಂತೆ ಪಂಚಾಯಿತಿಯವರು ಮುತುವರ್ಜಿ ವಹಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಮ್ಮತ್ತಿ ಗ್ರಾ.ಪಂ. ಉಪಾಧ್ಯಕ್ಷೆ ಶಾಂತ, ಮಾಜಿ ಜಿ.ಪಂ. ಸದಸ್ಯ ಮೂಕೊಂಡ ವಿಜು ಸುಬ್ರಮಣಿ, ಅಮ್ಮತ್ತಿ ಗ್ರಾ.ಪಂ ಸದಸ್ಯರುಗಳಾದ ಸುಮಲತಾ, ಪ್ರಶಾಂತ್, ಸುಗುಣ, ಕೇಚಂಡ ಅಶ್ವಿನಿ, ನಿತೀಶ್, ಹಾಗೂ ಬಿಜೆಪಿ ಪಕ್ಷದ ಪ್ರಮುಖರಾದ ಸುವಿನ್ ಗಣಪತಿ, ಮಲ್ಲಂಡ ಮಧುದೇವಯ್ಯ, ರೀಶಾ, ಗುತ್ತಿಗೆದಾರ ಮದನ್ ಚಂಗಪ್ಪ ಇನ್ನಿತರರು ಇದ್ದರು.