ಮಡಿಕೇರಿ, ಮಾ. ೨೦: ಜಿಲ್ಲೆಯಲ್ಲಿ ಸರಕಾರದ ವತಿಯಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಅಥವಾ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಕೊಡಗಿನ ಉದ್ಯಮಿ ಸ್ಯಾನ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಡಾ. ವಿಶ್ವ ಕಾರ್ಯಪ್ಪ ಬಿ.ಎಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಜಿಲ್ಲೆಯಲ್ಲಿ ಉತ್ತಮ ಆರೋಗ್ಯ ಸೌಲಭ್ಯಗಳಿಲ್ಲದೆ ಜಿಲ್ಲೆಯ ಬಡಜನರು ತೀವ್ರ ತೊಂದರೆಯನ್ನು ಎದುರಿಸುತ್ತಿದ್ದಾರೆ. ಇದರ ಬಗ್ಗೆ ರಾಜ್ಯ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು, ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಲ್ಟಿ ಸ್ಪೆಷಾಲಿಟ ಆಸ್ಪತ್ರೆಯ ನಿರ್ಮಾಣಕ್ಕೆ ಸಂಸ್ಥೆಯ ವತಿಯಿಂದ ೧ ಕೋಟಿ ರೂಪಾಯಿ ನೆರವು ಹಾಗೂ ಅಗತ್ಯ ಜಾಗವನ್ನು ನೀಡುವುದಾ ಗಿಯೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಕಾರ್ಯಾಲ ಯದಿಂದ ಮುಖ್ಯ ಕಾರ್ಯದರ್ಶಿ ಗಳಿಗೆ ಸೂಚನೆ ನೀಡಲಾಗಿದ್ದು ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣವಾಗುವ ನಿಟ್ಟಿನಲ್ಲಿ ಸಕಾರಾತ್ಮಕ ಬೆಳವಣಿಗೆಯನ್ನು ನಿರೀಕ್ಷಿಸುತ್ತಿದ್ದೇನೆ. ಇಲ್ಲದಿದ್ದಲ್ಲಿ ಈ ಬಗ್ಗೆ ಮುಂದಿನ ದಿನಗಳಲ್ಲಿ ಜನಾಂದೋಲನ ರೂಪಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಪರಿಸ್ಥಿತಿ ಎದುರಾಗಿದೆ. ಇದಕ್ಕೆ ಪರಿಹಾರ ನೀಡಬೇಕು ಎನ್ನುವ ಉದ್ದೇಶದಿಂದ ಮಡಿಕೇರಿಯಲ್ಲಿ ರಾಜ್ಯ ಸರಕಾರದಿಂದ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಬೇಕು ಎನ್ನುವ ಕೂಗು ಈಗ ಮತ್ತಷ್ಟು ಜೋರಾಗಿದೆ ಎಂದು ವಿವರಿಸಿದ್ದಾರೆ.