ಮಡಿಕೇರಿ, ಮಾ. ೨೫ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ತಾ.೨೮ ಮತ್ತು ೨೯ ರಂದು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕೊಡಗು ಜಿಲ್ಲಾ ಜಂಟಿ ಕ್ರಿಯಾ ಸಮಿತಿ ಬೆಂಬಲ ಸೂಚಿಸಿದೆ ಎಂದು ಸಮಿತಿಯ ಸಂಚಾಲಕ ಹೆಚ್.ಬಿ ರಮೇಶ್ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನ ವಿರೋಧಿ ನೀತಿಗಳ ವಿರುದ್ಧ ಹಾಗೂ ಪಾರ್ಲಿಮೆಂಟ್‌ನಲ್ಲಿ ೪ ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ ಮಂಡಿಸಿರುವ ಖಾಸಗಿ ಮಸೂದೆಯನ್ನು ವಿರೋಧಿಸಿ ತಾ.೨೮ ರಂದು ತಾಲೂಕು ಮಟ್ಟದ ಮುಷ್ಕರ ನಡೆಯಲಿದ್ದು, ತಾ.೨೯ ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಮಟ್ಟದ ಪ್ರತಿಭಟನೆ ನಡೆಯಲಿದೆ ಎಂದರು.
ಪ್ರತಿಭಟನೆಯಲ್ಲಿ ನಿವೇಶನ ರಹಿತ ಕಾರ್ಮಿಕರಿಗೆ ನಿವೇಶನ ಒದಗಿಸಬೇಕು, ವನ್ಯ ಪ್ರಾಣಿಗಳ ಹಾವಳಿ ತಡೆಗಟ್ಟಬೇಕು, ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಕಾರ್ಮಿಕ ನ್ಯಾಯಾಲಯ ಸ್ಥಾಪನೆಯಾಗಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸ ಲಾಗುವುದು ಎಂದರು.
ಜಿಲ್ಲೆಯ ಕಾರ್ಮಿಕರು, ನೌಕರರು, ರೈತರು, ಮಹಿಳೆಯರು, ದಲಿತರು, ವಿದ್ಯಾರ್ಥಿಗಳು, ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ ಸೋಮಪ್ಪ, ಗ್ರಾ.ಪಂ ನೌಕರರ ಸಂಘಟನೆ ಜಿಲ್ಲಾಧ್ಯಕ್ಷ ಪಿ.ಆರ್ ಭರತ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು ಮಾತನಾಡಿದರು.
 
						