ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಹೇಗೆ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ, ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠವಾಗಿದೆ. ಈ ಹಬ್ಬವು ಬ್ರಹ್ಮದೇವನ ಸೃಷ್ಟಿಯ ದಿನ ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದು ಹೇಳುತ್ತಾರೆ.
ಚೈತ್ರ ಮಾಸದಿಂದ ವಸಂತ ಋತು ಆರಂಭವಾಗುತ್ತದೆ. ವನಗಳೆಲ್ಲ ಚಿಗುರಿ ಹೂ ಬಿಟ್ಟು ಯುಗಾದಿಯು ಹರ್ಷವನ್ನು ಬೀರುವವು. ಎಲ್ಲಿ ನೋಡಿದರೂ ಮರಗಿಡ-ಬಳ್ಳಿಗಳು ಹಸಿರಾಗಿ ನಳನಳಿಸುತ್ತಿರುವುದನ್ನು ಕಾಣಬಹುದು.
ರೈತರು ಎತ್ತುಗಳನ್ನು ಶೃಂಗರಿಸಿ ಸಂಭ್ರಮದಿAದ ಹಬ್ಬವನ್ನು ಆಚರಿಸುತ್ತಾರೆ. ವ್ಯಾಪಾರಿಗಳು ಹಾಗೂ ಇನ್ನಿತರರು ಕೂಡ ಇಂದಿನ ದಿನವೇ ಶುಭ ಕಾರ್ಯವನ್ನು ಪ್ರಾರಂಭಿಸುತ್ತಾರೆ. ಇಂದು ಹುಣಸೇ ಹಣ್ಣು, ಬೆಲ್ಲ, ಮಾವಿನ ಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ‘ಪಚ್ಚಡಿ’ ಎಂಬ ಹೆಸರಿನ ಪದಾರ್ಥವನ್ನು ಸೇವಿಸುತ್ತಾರೆ.
ಬೇವು ಬೆಲ್ಲವು ಸುಖ-ದುಃಖ, ರಾತ್ರಿ-ಹಗಲು ಇವುಗಳ ಸಂಕೇತಗಳಾಗಿವೆ. ಜೀವನ ಕಷ್ಟ, ಸುಖ, ನೋವು, ನಲಿವುಗಳ ಸಮ್ಮಿಶ್ರಣವಾಗಿದೆ. ಇವೆರಡೂ ಒಟ್ಟಿಗೆ ಇರುವವು. ಎರಡನ್ನೂ ಸಮದೃಷ್ಟಿಯಿಂದ ಸವಿಯುವುದನ್ನು ಕಲಿಯಲೆಂದೇ ಯುಗಾದಿಯಂದು ಬೇವು ಬೆಲ್ಲವನ್ನು ತಿನ್ನುತ್ತಾರೆ.
‘ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ’
ಎಂದು ಹೇಳುತ್ತಾ ನಾವು ಎಲ್ಲರೂ ಯುಗಾದಿಯ ನಿಜ ಅರ್ಥ ತಿಳಿದು ಆಚರಿಸೋಣ.
- ತನ್ವಿ ಜಿತೇಂದ್ರ, ೮ನೇ ತರಗತಿ,
ಫಾತಿಮ ಹಿರಿಯ ಪ್ರಾಥಮಿಕ ಶಾಲೆ, ಕುಶಾಲನಗರ.