ಕುಶಾಲನಗರ, ಏ. ೭: ಸರಕಾರ ಕೂಡಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸ ಬೇಕೆಂದು ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ಆಗ್ರಹಿಸಿದ್ದಾರೆ.
ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಗಳ ಪುಣ್ಯರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್. ಅಶೋಕ್, ಪರಿಶಿಷ್ಟ ಪಂಗಡಕ್ಕೆ ಶೇ. ೭.೫ ಮೀಸಲಾತಿಯನ್ನು ನೀಡಬೇಕೆಂದು ಕಳೆದ ೫೩ ದಿನಗಳಿಂದ ಶ್ರೀ ಪ್ರಸನ್ನ ನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ಸರ್ಕಾರ ಯಾವುದೇ ರೀತಿಯ ತೀರ್ಮಾನ ಕೈಗೊಳ್ಳದಿರುವುದು ವಿಷಾದನೀಯ ಎಂದು ಹೇಳಿದರು.
ಈ ಹೋರಾಟಕ್ಕೆ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಯಾವುದೇ ರೀತಿಯ ಹೋರಾಟಕ್ಕೆ ಸಿದ್ಧ ಎಂದರು. ಇದೇ ಸಂದರ್ಭ ಲಿಂಗೈಕ್ಯ ಜಗದ್ಗುರು ಶ್ರೀ ಪುಣ್ಯಾನಂದಪುರಿ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಸಂಘದ ಪ್ರಮುಖರು ಪುಷ್ಪಾರ್ಚನೆ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ವೈ.ಟಿ. ಪರಮೇಶ್, ಸಂಘಟನಾ ಕಾರ್ಯದರ್ಶಿ ಕೆ.ಆರ್. ಚಂದ್ರು, ನಿರ್ದೇಶಕರಾದ ಚಂದನ್ ಕುಮಾರ್, ಕೆ.ಸಿ. ಸುರೇಶ್ ಇದ್ದರು.