ಉಡುಪಿ, ಏ. ೧೨: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡಿ ನಾಪತ್ತೆಯಾಗಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಇದೀಗ ಉಡುಪಿಯ ಶಾಂಭವಿ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧದ ಆರೋಪಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.
ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್ನಲ್ಲಿ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದರು.
ಶಾಂಭವಿ ಲಾಡ್ಜ್ ರೂಮ್ ನಂಬರ್ ೨೦೭ರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ನ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್ಗೆ ಡೆತ್ನೋಟ್ ವಾಟ್ಸಪ್ ಮೆಸೇಜ್ ಕಳಿಸಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ವಾಟ್ಸಪ್ ಮೆಸೇಜ್ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್ನೋಟ್ ಕಳಿಸಿದ್ದಾರೆ. ಈ ಡೆತ್ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಪೊಲೀಸರು ಮುಂದಾಗಿದ್ದರು. ಆಗ ಅವರ ಮೊಬೈಲ್ ಉಡುಪಿಯಲ್ಲಿ ಸಕ್ರಿಯವಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಾವು ಮಾಡಿದ ೧೦೮ ಕಾಮಗಾರಿ ಬಿಲ್ ಪಾವತಿಗೆ ೪೦ ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಈ ಸಂಬAಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.
ಡೆತ್ ನೋಟ್ ಸಂದೇಶದಲ್ಲೇನಿದೆ?
“ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ, ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು. ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ್ ಮತ್ತು ಪ್ರಶಾಂತ್ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡು ಬಂದಿರುತ್ತೇನೆ, ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬAಧ ಇರುವುದಿಲ್ಲ’’ ಎಂದು ಬರೆದು ಸಂದೇಶ ಕಳಿಸಿದ್ದಾರೆ.
(ಮೊದಲ ಪುಟದಿಂದ) ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, "ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬAಧ ತನಿಖೆಯಾಗಬೇಕು. ಮೊದಲು ಡೆತ್ ನೋಟ್ ಸಂಬAಧ ಎಫ್ಐಆರ್ ದಾಖಲಾಗಬೇಕು. ಸಿಎಂ ಬಸವರಾಜ ಬೊಮ್ಮಾಯಿ, ಗೃಹ ಸಚಿವರು ಏನೂ ಮಾಡಲ್ಲ ಅಂತ ಗೊತ್ತು. ಡಿಜಿಪಿ ರಾಜ್ಯದಲ್ಲಿ ಬದುಕಿದ್ದರೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ," ಎಂದು ಸವಾಲೆಸೆದಿದ್ದಾರೆ.
ಬಿಜೆಪಿ ಸರ್ಕಾರದ ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಬಿಜೆಪಿ ಸರ್ಕಾರದ ಎಲ್ಲ ವಿಭಾಗಗಳಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬರುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಪ್ರತಿಕ್ರಿಯಿಸಿದ್ದಾರೆ. ಕೆಎಸ್ ಈಶ್ವರಪ್ಪ ಸಂತೋಷ್ ಪಾಟೀಲ್ ಸಾವಿಗೆ ಸಂಪೂರ್ಣ ಹೊಣೆಗಾರರಾಗಿದ್ದು, ಅವರನ್ನು ರಾಜ್ಯ ಸಚಿವ ಸಂಪುಟದಿAದ ವಜಾಗೊಳಿಸಿ ಕೇಸು ದಾಖಲಿಸಬೇಕು ಎಂದು ಸಿದ್ದರಾಮಯ್ಯ ಕೂಡ ಆಗ್ರಹಿಸಿದ್ದಾರೆ.
ಈಶ್ವರಪ್ಪ ಪ್ರತಿಕ್ರಿಯೆ
ಇನ್ನು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, "ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರಾ? ಯಾಕೆ?," ಎಂದು ಮರುಪ್ರಶ್ನಿಸಿದರು.
"ಅವರು ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಅವರು ನನ್ನ ಮೇಲೆ ಕಮಿಷನ್ ಆರೋಪ ಮಾಡಿದ್ದರು. ಯಾಕೆ ಆರೋಪ ಮಾಡಿದ್ದೆ ಎಂದು ಕೇಳುವುದಕ್ಕೆ ಇಂದು ಅವರೇ ಇಲ್ಲ. ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಕೋರ್ಟ್ ಕೂಡಾ ವಿಚಾರಣೆ ಅಂಗೀಕರಿಸಿತ್ತು," ಎಂದು ಪ್ರತಿಕ್ರಿಯಿಸಿದರು. "ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಮತ್ತು ಒಂದು ಖಾಸಗಿ ಚಾನೆಲ್ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನ್ಯಾಯಾಲಯದಿಂದ ಸಂತೋಷ್ ಪಾಟೀಲ್ಗೆ ನೋಟೀಸ್ ಹೋಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು," ಎಂದರು. ಕಾಂಗ್ರೆಸ್ ರಾಜೀನಾಮೆ ನೀಡುವಂತೆ ಆಗ್ರಹಿಸಿರುವ ಕುರಿತು ಉತ್ತರಿಸಿ, "ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ. ತನಿಖೆ ನಡೆಯಲಿ. ನನ್ನ ಮೇಲೆ ಆರೋಪ ಮಾಡಿದವರು ನ್ಯಾಯಾಲಯದಲ್ಲಿ ಸಾಬೀತು ಮಾಡಬೇಕಿತ್ತು. ಹಾಗಾಗಿ ಆತ್ಮಹತ್ಯೆಗೂ ನನಗೂ ಸಂಬAಧವಿಲ್ಲ," ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಸಿಎಂ ಬೊಮ್ಮಾಯಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡ ನಂತರ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಯೋಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಕರಣದ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಮತ್ತು ಮುಕ್ತ ತನಿಖೆಗೆ ಅವಕಾಶ ನೀಡಲಾಗುವುದು. ಈಶ್ವರಪ್ಪನವರ ಮೇಲೆ ಲಂಚದ ಆರೋಪ ಹೊರಿಸಿರುವ ಪಾಟೀಲ್ ಅವರು ಈ ಬಗ್ಗೆ ಸರ್ಕಾರಕ್ಕೆ ಯಾವುದೇ ದೂರು ನೀಡಿಲ್ಲ ಮತ್ತು ಅವರು ಕೇವಲ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದಾರೆ ಎಂದು ಹೇಳಿದರು.
ಸಚಿವ ಈಶ್ವರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಸಹ ದಾಖಲಿಸಿದ್ದಾರೆ. ಅದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಸಂತೋಷ್ ಆತ್ಮಹತ್ಯೆ ಘಟನೆಗೆ ಸಂಬAಧಿಸಿದAತೆ ಸಿಎಂ ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ರಾಜೀನಾಮೆ ನೀಡಿದ್ದರಾ? ಎಂದು ಪ್ರಶ್ನಿಸಿದರು.
ಟೆಂಡರ್ ನೀಡಿರಲಿಲ್ಲ : ಸ್ಪಷ್ಟನೆ
ಈ ನಡುವೆ ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾಂiÀiðದರ್ಶಿ ಎಲ್.ಕೆ ಅತೀಕ್ ಹೊರಡಿಸಿರುವ ಪ್ರಕಟಣೆಯಲ್ಲಿ ಸಾವಿಗೀಡಾದ ಗುತ್ತಿಗೆದಾರ ಸಂತೋಷ್ ಪಾಟೀಲ್ಗೆ ಇಲಾಖೆಯಿಂದ ಯಾವದೇ ಟೆಂಡರ್ ನೀಡಿರಲಿಲ್ಲ; ಹಣ ಪಾವತಿಸಲೂ ಬಾಕಿಯಿಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.