ಮಡಿಕೇರಿ, ಏ. ೧೩: ಜೆಡಿಎಸ್ ವತಿಯಿಂದ ತಾ. ೧೬ ರಂದು ತಲಕಾವೇರಿಯಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ, ಜಾನುವಾರುಗಳಿಗೆ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು ರಾಜ್ಯಾದ್ಯಂತ ಜಲಧಾರೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ತಾ. ೧೬ ರಂದು ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ರಥಯಾತ್ರೆ ಮೂಲಕ ಮೆರವಣಿಗೆ ನಡೆಸಲಾಗುತ್ತದೆ. ಅದೇ ದಿನ ಮಡಿಕೇರಿ ಕಾವೇರಿ ಕಲಾಕ್ಷೇತ್ರದಲ್ಲಿ ಜೆಡಿಎಸ್ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಸಾ.ರಾ. ಮಹೇಶ್, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಿರಿಯಾಪಟ್ಟಣ ಶಾಸಕ ಮಹದೇವ್, ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಡಿಕೇರಿ ಸಭೆಯ ಬಳಿಕ ಕುಶಾಲನಗರ, ಹೆಬ್ಬಾಲೆ, ಕೊಡ್ಲಿಪೇಟೆ ಮಾರ್ಗವಾಗಿ ರಥಯಾತ್ರೆ ಹಾಸನ ಜಿಲ್ಲೆಯತ್ತ ಸಾಗಲಿದೆ ಎಂದು ಅವರು ಹೇಳಿದರು.

(ಮೊದಲ ಪುಟದಿಂದ) ಕೊಡಗು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಲಾಗುತ್ತಿದ್ದು, ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಹೋರಾಟ ಮಾಡಲಾಗುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿಯೂ ಮುಂದುವರೆಸಲಾಗುವುದೆAದರು.

ಜೆಡಿಎಸ್ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಂದಿದ್ದೇನೆಯೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಸ್ಪಷ್ಟಪಡಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷ ಸಂಘಟನೆಗಾಗಿ ಅವಕಾಶವನ್ನು ಕೇಳಿದ್ದೆ. ಆದರೆ, ರಾಜ್ಯ ನಾಯಕರು ಅದನ್ನು ಪರಿಗಣಿಸಲಿಲ್ಲ. ಆದ್ದರಿಂದ ಜೆಡಿಎಸ್ ಪಕ್ಷಕ್ಕೆ ಬಂದಿದ್ದು, ಪಕ್ಷದ ನಾಯಕರು ನೀಡುವ ಜವಬ್ದಾರಿ ನಿರ್ವಹಿಸಲಾಗುತ್ತದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಜೆಡಿಎಸ್ ಉಪಾಧ್ಯಕ್ಷ ಯೂಸೂಪ್, ಶಿವದಾಸ್, ಪಾಣತ್ತಲೆ ವಿಶ್ವನಾಥ, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಖ್‌ಖಾನ್ ಉಪಸ್ಥಿತರಿದ್ದರು.