ಮಡಿಕೇರಿ, ಏ. ೨೬: ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದರು. ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಘಟನೆಗಳು ಹಾಗೂ ಜಿಲ್ಲೆಯಾದ್ಯಂತ ಇರುವ ದೊಡ್ಡ ದೊಡ್ಡ ಕಂಪೆನಿ ತೋಟಗಳಲ್ಲಿರುವ ಮಕ್ಕಳ ಸ್ಥಿತಿಗತಿಗಳ ಮಾಹಿತಿಯನ್ನು ಪೊಲೀಸ್ ಅಧಿಕಾರಿಗಳಿಂದ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಾಥಮಿಕ ಶಾಲಾ ಶಿಕ್ಷಣದಿಂದ ವಂಚಿತರಾಗಿರುವ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸಲು ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು. ಎಸ್ಟೇಟ್ ಗಳ ವ್ಯಾಪ್ತಿಯಲ್ಲಿ ಶಾಲೆಗಳನ್ನು ತೆರೆಯಲು ಕಂಪೆನಿಗಳಿಗೆ ಸರ್ಕಾರದಿಂದ ನಿರ್ದೇಶನ ನೀಡುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

ವೃತ್ತ ನಿರೀಕ್ಷರಾದ ಮುದ್ದು ಮಾದಯ್ಯ ಮತ್ತು ಸಬ್ ಇನ್ಸ್ಪೆಕ್ಟರ್ ಅಚ್ಚಮ್ಮ ನವರು ಪರಿಷತ್ ಸದಸ್ಯರಿಗೆ ಮಾಹಿತಿ ನೀಡಿದರು.

ವೀಣಾ ಅಚ್ಚಯ್ಯರವರೊಂದಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರು ಹಾಗೂ ಕಾಂಗ್ರೆಸ್ ವಕ್ತಾರರಾದ ತೆನ್ನಿರಾ ಮೈನಾ, ಶಾಸಕರ ಆಪ್ತ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ಉಪಸ್ಥಿತರಿದ್ದರು.