ಗೋಣಿಕೊಪ್ಪಲು, ಮೇ ೧೮: ಇತ್ತೀಚಿನ ದಿನದಲ್ಲಿ ವಿಶೇಷವಾಗಿ ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು ಇದರಿಂದ ನಾಗರಿಕರು ಹೈರಾಣಾಗಿದ್ದಾರೆ. ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿ ವಿದ್ಯುತ್ ಪೂರೈಕೆ ಮಾಡುವಂತೆ ಮನವಿ ಮಾಡಿದ್ದರೂ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಒಂದು ವಾರದ ಒಳಗೆ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ, ಬಾಳೆಲೆ ಹಾಗೂ ಶ್ರೀಮಂಗಲ ಚೆಸ್ಕಾಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುವುದಾಗಿ ರೈತ ಸಂಘ ಎಚ್ಚರಿಕೆ ನೀಡಿದೆ.

ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆಯ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲುವಿನ ರೈತ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸಭೆಗೆ ಆಗಮಿಸಿದ ಚೆಸ್ಕಾಂನ ಮೈಸೂರು, ಕೊಡಗು ವಿಭಾಗದ ಹಿರಿಯ ಅಧಿಕಾರಿ ಸೋಮರಾಜ್ ಹಾಗೂ ವೀರಾಜಪೇಟೆ ತಾಲೂಕಿನ ಎಇಇ ನೀಲ್‌ಶೆಟ್ಟಿ ವಿದ್ಯುತ್ ನಿರಂತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಶ್ರೀಮಂಗಲ ೬೬ ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಆಗುತ್ತಿರುವ ಸಮಸ್ಯೆಗೆ ಪರಿಹಾರ ಹುಡುಕಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಬಗ್ಗೆ ಭರವಸೆ ನೀಡಿದರು.

ಈ ವೇಳೆ ಅಧಿಕಾರಿಗಳೊಂದಿಗೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಕೊಡಗು ಜಿಲ್ಲೆಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಒದಗಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆಯಿದ್ದರೂ ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಇದರಿಂದಾಗಿ ಹೋರಾಟವನ್ನು ಕೈಗೆತ್ತಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ.

ಒAದು ವಾರದ ಒಳಗೆ ವಿದ್ಯುತ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದಲ್ಲಿ ದಕ್ಷಿಣ ಕೊಡಗಿನ ವಿವಿಧ ಚೆಸ್ಕಾಂ ಕಚೇರಿಗೆ ಜಿಲ್ಲೆಯ ರೈತರು ತೆರಳಿ ಕಚೇರಿಗೆ ಬೀಗ ಜಡಿದು ಹೋರಾಟ ಮಾಡಬೇಕಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದೆಂದು ಹೇಳಿದರು.

ಚೆಸ್ಕಾಂ ಕಚೇರಿಗಳಲ್ಲಿ ನಿಗದಿತ ಸಿಬ್ಬಂದಿಗಳ ಕೊರತೆ, ವಿದ್ಯುತ್ ಕಂಬ, ಟ್ರಾನ್ಸ್ಪಾರ್ಮರ್‌ಗಳ ಕೊರತೆ ಇರದಂತೆ ನೋಡಿಕೊಂಡು ಈ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ, ಜಿಲ್ಲಾ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ವೀರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲAಡ ಸೂರಜ್, ಶ್ರೀಮಂಗಲ ಹೋಬಳಿ ಅಧ್ಯಕ್ಷ ಚೆಟ್ಟಂಗಡ ಕಂಬ ಕಾರ್ಯಪ್ಪ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಆಲೆಮಾಡ ಮಂಜುನಾಥ್, ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪAಡ ಪ್ರವೀಣ್, ವಿವಿಧ ಪದಾಧಿಕಾರಿಗಳಾದ ಪುಚ್ಚಿಮಾಡ ರಾಯ್ ಮಾದಪ್ಪ, ಚೊಟ್ಟೆಕಾಳಪಂಡ ಮನು, ತೀತರಮಾಡ ರಾಜ, ಸೇರಿದಂತೆ ಇನ್ನಿತರ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.