ಮಡಿಕೇರಿ, ಮೇ ೨೪: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ತಾ. ೩೦ ಮತ್ತು ೩೧, ಹಾಗೂ ಜೂನ್ ೧ ರಂದು ಬೆಂಗಳೂರು ನಗರದ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ನಡೆಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಘಟದ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದ್ದಾರೆ. ರಾಜ್ಯಾದ್ಯಂತ ಸುಮಾರು ೧೦ ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾ. ೩೦ ರಂದು ಸಂಜೆ ೪.೩೦ಕ್ಕೆ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸಚಿವ ಸಂಪುಟದ ಹಲವು ಸಚಿವರುಗಳು, ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಸೂಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಊಟೋಪಹಾರವನ್ನು ಕಲ್ಪಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಲಾಗುವುದು. ಅಖಿಲ ಭಾರತ ನಾಗರಿಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಅಭಿನಂದಿಸಲಾಗುವುದು.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಆನ್‌ಲೈನ್ ಮುಖಾಂತರ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಶ್ರೀನಿವಾಸ್ ತಿಳಿಸಿದ್ದಾರೆ.