ಪೊನ್ನಂಪೇಟೆ, ಮೇ ೨೫: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ಸೇವೆಗಳಲ್ಲಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆ ಗನುಗುಣವಾಗಿ ಹೆಚ್ಚಳ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠಾಧ್ಯಕ್ಷ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರ ಅಹೋರಾತ್ರಿ ಧರಣಿ ಸತ್ಯಾಗ್ರಹ ನೂರು ದಿನಗಳನ್ನು ದಾಟಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ಪ್ರತಿಭಟನೆ ಮಾಡಿ, ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ತಲುಪಿಸುವ ಕಾರ್ಯವನ್ನು ಮಾಡಲಾಯಿತು. ತಾ.೨೩ ರಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಕುಮಾರ್ ಅವರಿಗೆ ತಾಲೂಕು ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು. ಮನವಿ ಪತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶ ಮತ್ತು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸಂಸ್ಥೆ ಉದ್ದಿಮೆಗಳ ಎಲ್ಲಾ ನೇಮಕಾತಿಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬAಧಿಸಿದAತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಅವರ ಏಕ ಸದಸ್ಯ ಆಯೋಗದ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಪರಿಶಿಷ್ಟ ಪಂಗಡದವರ ಮೀಸಲಾತಿ ಪ್ರಮಾಣವನ್ನು ಶೇ.೩ ರಿಂದ ಶೇ.೭.೫ ಕ್ಕೆ ಹಾಗೂ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ. ೧೫ ರಿಂದ ೧೭.೫ ರಷ್ಟು ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ.

ಈ ಸಂದರ್ಭ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಟಿ. ಸುರೇಶ್, ಕಾರ್ಯದರ್ಶಿ ಪಿ.ಎ. ಮುತ್ತುರಾಜ್, ಗೌರವ ಸಲಹೆಗಾರರಾದ ಪಿ.ಟಿ. ರಮೇಶ್, ಪಿ.ವಿ. ರಾಜು, ಸದಸ್ಯರಾದ ಸುಧೀರ್, ಪ್ರಕಾಶ್ ನಾಯಕ, ಭವಿಶ್, ಪರಿಶಿಷ್ಟ ಜಾತಿಯ ಮುಖಂಡರಾದ ಪಳನಿ ಪ್ರಕಾಶ್ ಹಾಜರಿದ್ದರು.