ಸೋಮವಾರಪೇಟೆ, ಮೇ ೨೫: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಪರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಪ್ರತಿ ಮನೆಗೂ ಮಾಹಿತಿ ಒದಗಿಸಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಸೋಮವಾರಪೇಟೆ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾದರಿ ಆಡಳಿತ ನೀಡುತ್ತಿದ್ದು, ದೇಶದ ಪ್ರತಿಯೋರ್ವರಿಗೂ ಒಂದಿಲ್ಲೊAದು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು. ವಿಶ್ವದಲ್ಲಿಯೇ ಎರಡನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಕೋವಿಡ್ ಸಂದರ್ಭ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯಗಳು, ಲಸಿಕಾ ಕಾರ್ಯಕ್ರಮ ಇಡೀ ವಿಶ್ವದ ಗಮನ ಸೆಳೆದಿದೆ. ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗಳಲ್ಲಿ ಕುಂದು ಉಂಟಾಗದAತೆ ನೋಡಿಕೊಳ್ಳಲಾಗುತ್ತಿದೆ. ಜಾಗತಿಕ ಕಾರಣಗಳಿಂದ ಹಣದುಬ್ಬರ ಇದ್ದರೂ ಸಹ ಆರ್ಥಿಕ ಸ್ಥಿತಿ ಹದಗೆಡದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ರಂಜನ್ ಹೇಳಿದರು.

ಇದರೊಂದಿಗೆ ರೈತರಿಗೆ ಕೃಷಿ ಸಮ್ಮಾನ್ ಯೋಜನೆ, ಪ್ರಧಾನ ಮಂತ್ರಿ ಜನೌಷಧ್, ಉಜ್ವಲ ಯೋಜನೆಯ ಮೂಲಕ ಉಚಿತ ಗ್ಯಾಸ್, ಆಯುಷ್ಮಾನ್ ಆರೋಗ್ಯ ಯೋಜನೆ, ಉಚಿತ ಕೋವಿಡ್ ಲಸಿಕೆ, ಗೊಬ್ಬರಕ್ಕೆ ಸಹಾಯಧನ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಪ್ರತಿ ಮನೆಗೂ ಮಾಹಿತಿ ನೀಡುವ ಕಾರ್ಯ ಆಗಬೇಕು ಎಂದರು.

ಸಭೆಯಲ್ಲಿ ಭಾಗಿಯಾಗಿದ್ದ ಪಕ್ಷದ ಕೊಡಗು ಜಿಲ್ಲಾ ಪ್ರಭಾರಿ ಉದಯಕುಮಾರ್ ಶೆಟ್ಟಿ ಮಾತನಾಡಿ, ಕಾರ್ಯಕರ್ತರ ಶ್ರಮದಿಂದ ಪಕ್ಷ ಇಂದು ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿದೆ. ಸರ್ಕಾರದ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಪಕ್ಷ ಸಂಘಟನೆಯ ಜವಾಬ್ದಾರಿಯಲ್ಲಿರುವ ಮುಖಂಡರು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಮಂಡಲ ಮಾಜಿ ಅಧ್ಯಕ್ಷ ಕೊಮಾರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಾದಪ್ಪ, ರವಿ ಕಾಳಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.