ಮಡಿಕೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲೆ ನಳಿನಿ ಅವರು ವಹಿಸಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅನಿತಾ ಹೆಚ್.ಪಿ. ಅವರು ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಗೋಪಿನಾಥ್, ತಾಲೂಕು ಆರೋಗ್ಯಾದಿಕಾರಿ ಡಾ. ಚೇತನ್, ಜಿಲ್ಲಾ ವಿಶೇಷಚೇತನರ ಅಧಿಕಾರಿ ವಿಮಲ ಅವರು ಆಗಮಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ಶಾಸ್ತç ವಿಭಾಗದ ಡಾ. ಮಹೇಶ್ ಅವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ತಂಬಾಕಿನ ಉತ್ಪನ್ನಗಳು ಹಾಗೂ ಅದರ ಸೇವನೆಯಿಂದಾಗುವ ದೈಹಿಕ, ಮಾನಸಿಕ, ಪರಿಸರಕ್ಕೆ ಆಗುವ ಮಾರಕದ ಕುರಿತು ಉಪನ್ಯಾಸ ನೀಡಿದರು.

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ರವೀಶ್, ಎಸ್.ಬಿ.ಸಿ.ಸಿ. ಸಂಯೋಜಕರು ಕೋಟ್ಪಾ ಕಾಯಿದೆ ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷ ಧೂಮಪಾನಗಳಿಂದಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ತಂಬಾಕಿನ ಉತ್ಪನ್ನಗಳು ಹಾಗೂ ಅದರ ಸೇವನೆಯಿಂದಾಗುವ ಪರಿಸರಕ್ಕೆ ಮಾರಕ ಆಗುವ ಪೋಸ್ಟರ್‌ಗಳ ಬಿಡುಗಡೆ ಮಾಡಲಾಯಿತು ಹಾಗೂ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿಗಳು, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಆರ್.ಕೆ.ಎಸ್.ಕೆ. ಕಾರ್ಯಕ್ರಮ ಸಿಬ್ಬಂದಿಗಳು, ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರುಗಳು ಹಾಗೂ ಮಾಧ್ಯಮ ವೃಂದದವರು ಭಾಗವಹಿಸಿದ್ದರು.

ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ಆನಂದ್ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.