ಮಡಿಕೇರಿ, ಜೂ. ೩: ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿ ಸಲು ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಡಿಕೇರಿ ತಾಲೂಕು ಆರೋಗ್ಯಾ ಧಿಕಾರಿ ಡಾ. ಚೇತನ ಕರೆ ನೀಡಿದರು. ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕುರಿತು ಕರಿಕೆ ಗ್ರಾ.ಪಂ. ವತಿಯಿಂದ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯಾಧಿಕಾರಿ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕೆಂದು ಸಲಹೆ ನೀಡಿದರು. ಗ್ರಾ.ಪಂ. ಉಪಾಧ್ಯಕ್ಷ ಬಾಲಚಂದ್ರನ್ ನಾಯರ್ ಮಾತನಾಡಿ, ಮಳೆಗಾಲದಲ್ಲಿ ಡೆಂಗ್ಯೂ ಜ್ವರ ಹರಡದಂತೆ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

ಗ್ರಾ.ಪಂ. ಅಧ್ಯಕ್ಷೆ ಕಲ್ಪನಾ ಕೆ.ಜೆ. ಅವರ ಅಧ್ಯಕ್ಷತೆ ಯಲ್ಲಿ ಸಭೆ ನಡೆಯಿತು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್. ಪಾಲಾಕ್ಷ, ತಾಲೂಕು ಪಿ.ಹೆಚ್.ಸಿ. ದೇಚಮ್ಮ, ಕರಿಕೆ ಆರೋಗ್ಯಾಧಿಕಾರಿ ಡಾ. ಪುಂಡಲೀಕ ಲಮಾಣಿ, ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಪಿ.ಪಿ. ಗಣಪತಿ ವಂದಿಸಿದರು.

೩ ದಿನ ಸ್ವಚ್ಛತೆ: ಕರಿಕೆಯ ವಿವಿಧ ಸ್ಥಳಗಳಲ್ಲಿ ಪಂಚಾಯಿತಿ ವತಿಯಿಂದ ೩ ದಿನಗಳ ಕಾಲ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಸಭೆ ನಿರ್ಧರಿಸಿತು.