ನಾಪೋಕ್ಲು, ಜೂ. ೫: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ, ಕೋಕೇರಿ, ಚೇಲಾವರ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿದ್ದ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಸ್ಥಗಿತಗೊಳಿಸಿರುವ ಬಗ್ಗೆ ಈ ವ್ಯಾಪ್ತಿಯ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿರುವ ಗ್ರಾಮಸ್ಥರು, ಇಲ್ಲಿ ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಆರಂಭಗೊಳ್ಳುತ್ತಿದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆ ಸುರಿಯುವ ಕಾರಣದಿಂದ ಮಳೆಗಾಲದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಗೆ ಅಡ್ಡಿಯಾಗಲಿದೆ. ಆದ್ದರಿಂದ ಮುಂಗಾರು ಆರಂಭಕ್ಕೆ ಮೊದಲೇ ಈ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ನಡೆಸುವದರ ಮೂಲಕ ಕಾಡಾನೆಗಳನ್ನು ಸ್ಥಳಾಂತರಿಸಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.