ಸೋಮವಾರಪೇಟೆ,ಜೂ.೭: ಎಲ್ಲರನ್ನೂ ಒಂದುಗೂಡಿಸುವ ಶಕ್ತಿ ಕ್ರೀಡೆಗೆ ಇದೆ. ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ದಿ. ಅಪ್ಪು ಅವರ ಹೆಸರಿನಲ್ಲಿ ರಾಜ್ಯಮಟ್ಟದ ಕ್ರೀಡೆ ಆಯೋಜಿಸಿರುವುದು ಶ್ಲಾಘನೀಯ ಎಂದು ಮನೆಹಳ್ಳಿ ಮಠದ ಮಹಾಂತ ಸ್ವಾಮೀಜಿ ಅಭಿಪ್ರಾಯಿಸಿದರು.
ಜಿಲ್ಲಾ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಚಿತ್ರನಟ ದಿ. ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ರಾಜ್ಯ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಅವರ ಅಗಲಿಕೆ ಸಮಾಜಕ್ಕಾದ ನಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜ ಕಾರ್ಯ ಮಾಡಲು ಅಭಿಮಾನಿ ಬಳಗ ಮುಂದಾಗಬೇಕೆAದರು.
ಇನ್ಸ್ಪೆಕ್ಟರ್ ಬಿ.ಜಿ. ಮಹೇಶ್ ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಪ್ರತಿಭೆಗಳಿದ್ದು, ಅವರ ಪ್ರತಿಭೆ ಅನಾವರಣಕ್ಕೆ ವೇದಿಕೆಗಳ ಕೊರತೆ ಕಾಡುತ್ತಿದೆ. ಇಂತಹ ಕ್ರೀಡಾಕೂಟಗಳಿಂದ ಸ್ಥಳೀಯ ಪ್ರತಿಭೆಗಳು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ತಮ್ಮಲ್ಲಿನ ಪ್ರತಿಭೆ ಅನಾವರಣಕ್ಕೆ ದಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಗದ ಜಿಲ್ಲಾಧ್ಯಕ್ಷ ಎಸ್.ವಿ. ರಾಜಶೇಖರ್ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಹೇಶ್, ಜಯಕರ್ನಾಟಕ ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ, ಕರವೆ ತಾಲೂಕು ಘಟಕದ ಅಧ್ಯಕ್ಷ ಕೆ.ಎನ್. ದೀಪಕ್, ಕಲ್ಕಂದೂರು ಪ್ರಕಾಶ್, ಠಾಣಾಧಿಕಾರಿ ಕಾಶಿನಾಥ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.