ಮಡಿಕೇರಿ, ಜೂ. ೧೧: ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ- ಕನ್ನಡಿಗ- ಕರ್ನಾಟಕ ಹಿತರಕ್ಷಣೆಯ ಜವಾಬ್ದಾರಿಯನ್ನು ಹೊಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ೧೦೭ ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿದೆ. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ ಹಿನ್ನೆಲೆಯಲ್ಲಿ ‘ತತ್ವರಸಾಯನ’ ಎನ್ನುವ ಶೀರ್ಷಿಕೆಯಲ್ಲಿ ಸಂತ ಶಿಶುನಾಳ ಶರೀಫರ ತತ್ವಪದಗಳ ಆಧಾರಿತ ಸಂಗೀತ-ನೃತ್ಯ ಕಾರ್ಯಕ್ರಮವು ಜುಲೈ ೩ ರಂದು ಸಂಜೆ ೪ ರಿಂದ ೭ರವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಶಿಶುನಾಳ ಶರೀಫರ ಹಾಗೂ ಕಳಸದ ಗುರು ಗೋವಿಂದ ಭಟ್ಟರ ಪ್ರತಿಷ್ಠಾನ, ಶ್ರೀ ಶಾರದ ವಿದ್ಯಾಪೀಠ - ಕೈಜೋಡಿಸಿವೆ.

ಈ ಹಿನ್ನೆಲೆಯಲ್ಲಿ ಆಸಕ್ತ ಕಲಾವಿದರನ್ನು, ಜಾನಪದ ಕಲಾತಂಡದವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾಗಿದೆ. ಹೊಸಬರಿಗೆ ಹೆಚ್ಚಿನ ಅವಕಾಶ ನೀಡುವ ನಿಟ್ಟಿನಲ್ಲಿ ತಾ. ೧೮ ರಂದು ಬೆಳಿಗ್ಗೆ ೯ ಗಂಟೆಯಿAದ ತತ್ವಪದಗಳ ಗಾಯಕರಿಗೆ ಆಯ್ಕೆ ಪ್ರಕ್ರಿಯೆಯನ್ನು ಮತ್ತು ತಾ. ೧೯ ರಂದು ಬೆಳಿಗ್ಗೆ ೯ ಗಂಟೆಯಿAದ ನೃತ್ಯ ತಂಡದವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಆಯ್ಕೆ ಪ್ರಕ್ರಿಯೆಯನ್ನು ನಡೆಸಲಿದೆ.

ಆಸಕ್ತ ಸಂಗೀತ ಕಲಾವಿದರು, ನೃತ್ಯ ತಂಡದವರು ನೇರವಾಗಿ ತಾ. ೧೮, ೧೯ರಂದು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ವಿಳಾಸ, ಗಾಯನ / ನೃತ್ಯದ ಅನುಭವದ ವಿವರಣೆಗಳುಳ್ಳ ಸ್ವ-ವಿವರಗಳನ್ನೊಳಗೊಂಡ ಅರ್ಜಿಯೊಂದಿಗೆ, ಅಕ್ಕಮಹಾದೇವಿ ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-೫೬೦ ೦೧೮ ಇಲ್ಲಿ ಹಾಜರಾಗಬೇಕೆಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಜಿಲ್ಲೆಯ ಕಲಾವಿದರಲ್ಲಿ ಕೋರಿದ್ದಾರೆ.