ಪೊನ್ನಂಪೇಟೆ, ಜೂ. ೧೪: ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎಸ್‌ಸಿ-ಎಸ್‌ಟಿ ಸೆಲ್ ಹಾಗೂ ಐಕ್ಯೂಎಸಿ ಸೆಲ್‌ನ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೌಲಭ್ಯಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಡಿ.ಜಿ. ಗುರುಶಾಂತಪ್ಪ ಉದ್ಘಾಟಿಸಿ ಮಾತನಾಡಿ, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸೂಕ್ತ ಸಮಯಕ್ಕೆ ಪಡೆದುಕೊಂಡು ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವ ಮೂಲಕ ಸಮಾಜದಲ್ಲಿ ತಮ್ಮನ್ನು ಗುರುತಿಸಿಕೊಳ್ಳಬೇಕು. ಶಿಕ್ಷಣವೊಂದೇ ಸಮಾಜದಲ್ಲಿರುವ ಅಸಮಾನತೆಯನ್ನು ತೊಡೆದುಹಾಕಲು ಇರುವ ಅಸ್ತç ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ, ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರದ ವತಿಯಿಂದ ವಿದ್ಯಾರ್ಥಿ ವೇತನ ದೊರೆಯುತ್ತದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆದ ಸಂದರ್ಭ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿನಿಲಯಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು. ಸರ್ಕಾರಿ ನೌಕರಿ ಪಡೆಯಬೇಕಾದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಕೊಳ್ಳಬೇಕು. ಅದಕ್ಕಾಗಿ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕಾಗುತ್ತದೆ. ಪ್ರತಿದಿನ ದಿನಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಂಡು, ಪತ್ರಿಕೆಯಲ್ಲಿ ಬರುವ ಸಾಮಾನ್ಯ ಜ್ಞಾನ, ವಿಶೇಷ ಮಾಹಿತಿಗಳನ್ನು ಗುರುತು ಮಾಡಿ ಬರೆದುಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಶಿಬಿರಗಳಲ್ಲಿ ಭಾಗವಹಿಸಿ ಪರೀಕ್ಷೆ ತಯಾರಿ ಬಗ್ಗೆ ತಿಳಿದುಕೊಳ್ಳಬೇಕು. ಸತತ ಪ್ರಯತ್ನವಿದ್ದರೆ ಯಶಸ್ಸು ಖಂಡಿತ ಸಿಕ್ಕೇ ಸಿಗುತ್ತದೆ ಎಂದರು.

ಉಪಪ್ರಾAಶುಪಾಲೆ ಡಾ. ಎ.ಎಸ್. ಪೂವಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಪ್ರೊ. ಎಂ.ಎಸ್. ಭಾರತಿ, ಉಪನ್ಯಾಸಕರಾದ ಅಕ್ಷತಾ, ರಾಜೇಶ್ವರಿ ಇದ್ದರು. ಕಾಲೇಜಿನ ಎಸ್‌ಸಿ-ಎಸ್‌ಟಿ ಸೆಲ್‌ನ ಸಂಚಾಲಕ ಪ್ರೊ. ಆರ್. ತಿಪ್ಪೇಸ್ವಾಮಿ ಸ್ವಾಗತಿಸಿದರು. ಲೀಟಾ ಪ್ರಾರ್ಥಿಸಿ, ರಾಚಯ್ಯ ವಂದಿಸಿ, ಸಂಜೀವ ನಿರೂಪಿಸಿದರು.