*ಸಿದ್ದಾಪುರ ಜೂ. ೧೯: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಅಭಿಯಾನ ವಿಫಲವಾಗಿದೆ. ಪಟ್ಟಣದ ಹೃದಯ ಭಾಗದಲ್ಲೇ ಕಸದ ರಾಶಿ ದುರ್ವಾಸನೆ ಬೀರುತ್ತಿದ್ದು, ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಎಂ.ಜಿ. ಕಾಲೋನಿಗೆ ತೆರಳುವ ಮುಖ್ಯ ರಸ್ತೆಯ ಬದಿಯಲ್ಲೇ ಕಸÀದ ರಾಶಿಯನ್ನು ಸುರಿಯಲಾಗುತ್ತಿದೆ. ಮಾಂಸ ಮತ್ತು ಮೀನಿನ ತ್ಯಾಜ್ಯವನ್ನು ಕೂಡ ಹಾಕಲಾಗುತ್ತಿದ್ದು, ನೊಣ ಮತ್ತು ನಾಯಿಗಳ ಹಾವಳಿ ಮಿತಿ ಮೀರಿದೆ. ಸಿಸಿ ಕ್ಯಾಮರಾ ಅಳವಡಿಸಿದ್ದರೂ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸ್ವಚ್ಛ ಭಾರತ ಅಭಿಯಾನದಡಿ ಕಸ ವಿಲೇವಾರಿಗೆ ಆಟೋ ಟಿಪ್ಪರ್ ನೀಡಿದ್ದರೂ ಶುಚಿತ್ವ ಕಾಪಾಡುವಲ್ಲಿ ಆಡಳಿತ ವ್ಯವಸ್ಥೆ ವಿಫಲವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡೇ ತೆರಳಬೇಕಾದ ಪರಿಸ್ಥಿತಿ ಇದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ವ್ಯಕ್ತವಾಗಿದೆ. ಮಳೆಗಾಲದಲ್ಲಿ ಮತ್ತಷ್ಟು ಪರಿಸ್ಥಿತಿ ಹದಗೆಟ್ಟು ಕಸದ ರಾಶಿ ಕೊಳೆತು ನಾರಲಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಕ್ಷಣ ಗ್ರಾ.ಪಂ. ಎಚ್ಚೆತ್ತುಕೊಂಡು ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಮತ್ತು ನಿಯಮ ಬಾಹಿರವಾಗಿ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

- ಸುಧಿ