ಸೋಮವಾರಪೇಟೆ, ಜೂ. ೨೨: ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಕೈಗೊಂಡಿರುವ ರೈತರಿಗೆ ಭೂಮಿಯನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಎದುರಾದ ಲೋಕಸಭಾ ಚುನಾವಣೆ ಹಿನ್ನೆಲೆ ಸಾಕಷ್ಟು ಮಂದಿಗೆ ನಿಗದಿತ ಕಾಲಮಿತಿಯೊಳಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಕಂದಾಯ ಸಚಿವರ ಗಮನ ಸೆಳೆದು ವಿಧಾನ ಸಭೆಯಲ್ಲೂ ಪ್ರಸ್ತಾಪಿಸಿದ ಹಿನ್ನೆಲೆ ಇದೀಗ ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಶಾಸಕ ರಂಜನ್ ತಿಳಿಸಿದರು.

ತಾ. ೩೦.೦೫.೨೦೨೨ ರಿಂದ ೩೦.೦೫.೨೦೨೩ರವರೆಗೆ ಫಾರಂ ೫೭ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕು ಅಕ್ರಮ ಸಕ್ರಮ ಸಮಿತಿಯ ಸಭೆಗಳನ್ನು ಆಗಾಗ್ಗೆ ನಡೆಸುವ ಮೂಲಕ ಅರ್ಜಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸಭೆಯಲ್ಲಿ ಒಟ್ಟು ೨೧೪ ಅರ್ಜಿಗಳ ಪರಿಶೀಲನೆ ನಡೆಸಲಾಗಿದ್ದು, ಕ್ರಮಬದ್ಧವಾದ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ರಂಜನ್ ತಿಳಿಸಿದರು.

ಸಭೆಯಲ್ಲಿ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಆರ್.ಗೋವಿಂದರಾಜು, ಕುಶಾಲನಗರ ತಹಶೀಲ್ದಾರ್ ಪ್ರಕಾಶ್, ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ಸುಮಾ ಸುದೀಪ್, ಕೊಮಾರಪ್ಪ, ಕೆಂಚೇಶ್ವರ್ ಅವರುಗಳು ಉಪಸ್ಥಿತರಿದ್ದರು.