ಸೋಮವಾರಪೇಟೆ, ಜೂ. ೨೨: ನಿಗದಿತ ಅವಧಿಯೊಳಗೆ ತಮ್ಮ ಇಲಾಖೆಗಳ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ವರದಿ ನೀಡ ಬೇಕೆಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ತಾಲೂಕು ಪಂಚಾಯಿತಿ ಪ್ರöಗತಿ ಪರಿಶೀಲನಾ ಸಭೆ ಆಡಳಿತಾಧಿಕಾರಿ ರಾಜ್‌ಗೋಪಾಲ್ ಅಧ್ಯಕ್ಷತೆಯಲ್ಲಿ ತಾ. ಪಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಹಿಂದಿನ ಸಭೆಯ ನಡಾವಳಿಗಳ ಬಗ್ಗೆ ತೆಗೆದುಕೊಂಡ ಕ್ರಮಗಳ ಕುರಿತು ಪರಿಶೀಲಿಸಲಾಯಿತು. ಮೇ ೨೦೨೨ರ ಅಂತ್ಯದವರೆಗಿನ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿಗಳು, ನಿಗದಿತ ಅವಧಿಯೊಳಗೆ ಶೇಕಡ ೧೦೦ರಷ್ಟು ಭೌತಿಕ ಮತ್ತು ಆರ್ಥಿಕ ಗುರಿ ಸಾಧಿಸುವಂತೆ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಬಹುತೇಕ ರಾಜ್ಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಬದಿಯಲ್ಲಿ ಮರಗಳನ್ನು ಲಾರಿಗಳಿಗೆ ಲೋಡ್ ಮಾಡುತ್ತಿದ್ದು, ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೊಡಕು ಉಂಟಾಗಿದೆ. ಇದನ್ನು ತಡೆಗಟ್ಟಲು ಕೂಡಲೇ ಕ್ರಮವಹಿಸುವಂತೆ ನಾಮನಿರ್ದೇಶನ ಸದಸ್ಯರಾದ ಗಂಗಾಧರ್ ಅವರು ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಬಿ.ಸಿ.ಎಂ ಮತ್ತು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳ ವಸತಿ ನಿಲಯ ಗಳಲ್ಲಿರುವ ಮಕ್ಕಳನ್ನು ಪೋಷಕರ ಅನುಮತಿಯಿಲ್ಲದೆ ಶನಿವಾರ ಮತ್ತು ಭಾನುವಾರದಂದು ಮನೆಗೆ ಕಳುಹಿಸುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲಿಸಬೇಕೆಂದು ಸದಸ್ಯರುಗಳು ಮನವಿ ಮಾಡಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ವಿ.ಜಯಣ್ಣ, ನಾಮನಿರ್ದೇಶಿತ ಸದಸ್ಯರುಗಳು, ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.