*ಗೋಣಿಕೊಪ್ಪ, ಜೂ. ೨೪: ಮೂರು ತಿಂಗಳಿನಿAದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗೌರವಧನ ಪಾವತಿಯಾಗಿಲ್ಲ. ಇದರಿಂದ ಕಾರ್ಯಕರ್ತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಶೀಘ್ರವಾಗಿ ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಅಧ್ಯಕ್ಷೆ ಕೆ.ಪಿ. ಕಾವೇರಮ್ಮ ಹಾಗೂ ತಾಲೂಕು ಅಧ್ಯಕ್ಷೆ ಸುಮಿತ್ರಾ ಎಚ್ಚರಿಸಿದ್ದಾರೆ.

ಕಳೆದ ಏಪ್ರಿಲ್ ತಿಂಗಳಿನಿAದ ಕೇಂದ್ರ ಸರ್ಕಾರದ ಸೂಚನೆಯಂತೆ ಹೊಸ ವೇತನ ಪಾವತಿ ಅನುಷ್ಠಾನದ ಕ್ರಮದಲ್ಲಿನ ತಾಂತ್ರಿಕ ಸಮಸ್ಯೆಯಿಂದ ವೇತನ ಪಾವತಿಗೆ ಅಡಚಣೆಯಾಗಿದೆ. ಇದರಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಕುಟುಂಬ ನಿರ್ವಹಣೆ ಮಾಡಲು ಅಸಾಧ್ಯವಾದ ಪರಿಸ್ಥಿತಿಯಲ್ಲಿ ಮತ್ತು ಮಕ್ಕಳ ಶಾಲಾ, ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ. ಕಾರ್ಯಕರ್ತರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಪತ್ರವನ್ನು ನೀಡಲು ನಿರ್ಧರಿಸಲಾಗಿದೆ.

ಮುಂದಿನ ನಾಲ್ಕು ದಿನದಲ್ಲಿ ವ್ಯವಸ್ಥೆ ಸರಿಯಾಗದಿದ್ದರೆ ಅಂಗನವಾಡಿಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂದರ್ಭ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಪದಾಧಿಕಾರಿಗಳು ಇದ್ದರು.