ಕುಶಾಲನಗರ, ಜೂ. ೨೫: ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಶತಮಾನೋತ್ಸವ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ತಾ. ೨೭ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ.ಆರ್. ಶರಣಕುಮಾರ್ ತಿಳಿಸಿದ್ದಾರೆ.
ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಶತಮಾನೋತ್ಸವ ವಾಣಿಜ್ಯ ಸಮುಚ್ಚಯ ಭವನದ ಶಂಕುಸ್ಥಾಪನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ನಡೆಯಲಿದ್ದು ರಾಜ್ಯ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಶಂಕುಸ್ಥಾಪನೆ ನೆರವೇರಿಸುವರು. ಸಮುದಾಯ ಭವನದ ಶಂಕುಸ್ಥಾಪನೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಸಲಿದ್ದಾರೆ. ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ ಕುಶಾಲನಗರ ರೈತ ಸಹಕಾರ ಭವನದಲ್ಲಿ ಬೆಳಗ್ಗೆ ನಡೆಯಲಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಸಿ ನಾಗೇಶ್ ಉದ್ಘಾಟನೆ ಮಾಡುವರು. ಮಡಿಕೇರಿ ಕ್ಷೇತ್ರ ಶಾಸಕ ಎಂ ಪಿ ಅಪ್ಪಚ್ಚುರಂಜನ್ ಸಹಕಾರ ಧ್ವಜಾರೋಹಣ ನೆರವೇರಿಸುವರು. ಸಂಘದ ಅಧ್ಯಕ್ಷರಾದ ಟಿ.ಆರ್. ಶರಣಕುಮಾರ್ ಅಧ್ಯಕ್ಷತೆಯಲ್ಲಿ ಬೆಳಗ್ಗೆ ೧೦.೩೦ ಕ್ಕೆ ನಡೆಯುವ ಸಮಾರಂಭದಲ್ಲಿ ಅರಮೇರಿ ಕಳಂಚೇರಿ ಮಠಾಧೀಶರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಕೆ ಜಿ ಬೋಪಯ್ಯ ಮತ್ತು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಬಾಂಡ್ ಗಣಪತಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಸಹಕಾರ ಸಂಘದ ಶತಮಾನೋತ್ಸವ ಸಮಾರೋಪ ಮತ್ತು ಸನ್ಮಾನ ಕಾರ್ಯಕ್ರಮ ಅಪರಾಹ್ನ ೩:೩೦ ಕ್ಕೆ ನಡೆಯಲಿದ್ದು, ಕರ್ನಾಟಕ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ ದೇವೇಗೌಡ ಉದ್ಘಾಟಿಸುವರು. ಸಚಿವರಾದ ಎಸ್.ಟಿ. ಸೋಮಶೇಖರ್ ಸಂಘದ ಅಧ್ಯಕ್ಷರು ಉಪಾಧ್ಯಕ್ಷರುಗಳನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಉಪಾಧ್ಯಕ್ಷರಾದ ವಿ.ಎಸ್. ಆನಂದಕುಮಾರ್, ಸಂಘದ ನಿರ್ದೇಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ ಲೋಕೇಶ್ ಇದ್ದರು.