ಕುಶಾಲನಗರ, ಜೂ. ೨೯: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಕೆಲವು ಸದಸ್ಯರ ಆಕ್ಷೇಪಣೆ ಹಿನ್ನೆಲೆಯಲ್ಲಿ ಕುಶಾಲನಗರ ಪುರಸಭೆ ಅಧಿಕೃತ ಘೋಷಣೆಯಾಗಲು ಹಿನ್ನಡೆಯಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಶಾಲನಗರವನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಲು ಜನಸಂಖೈ ಕೊರತೆ ನೀಗಿಸಬೇಕಾಗಿದೆ. ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರು ಆಕ್ಷೇಪಣೆ ವ್ಯಕ್ತಪಡಿಸಿದ್ದು ಪುರಸಭೆಯಾಗಿ ಸರ್ಕಾರ ಘೋಷಣೆ ಹೊರಡಿಸಲು ತೊಡಕು ಉಂಟಾಗಿದೆ ಎಂದು ಹೇಳಿದರು.
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿ ಪ್ರದೇಶವನ್ನು ಕುಶಾಲನಗರ ಪುರಸಭೆ ವ್ಯಾಪ್ತಿಗೆ ಒಳಪಡಿಸಿ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಪಟ್ಟಣ ವ್ಯಾಪ್ತಿಯ ಪ್ರದೇಶವನ್ನು ಒಳಗೊಂಡು ಪುರಸಭೆಗೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉಳಿಸಿಕೊಳ್ಳಲು ಚಿಂತಿಸಲಾಗಿದೆ. ಗ್ರಾಮೀಣ ಪ್ರದೇಶದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಭವಿಷ್ಯಕ್ಕೆ ಬಳಸಿಕೊಳ್ಳಲು ಸಾಧ್ಯ ಎಂದು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಎಲ್ಲಾ ತಾಂತ್ರಿಕ ಕಾರಣಗಳಿಂದ ಕುಶಾಲನಗರ ಪಟ್ಟಣ ಪಂಚಾಯಿತಿ ಪುರಸಭೆಯಾಗಿ ಮೇಲ್ದರ್ಜೆಗೆ ಏರಲು ಇನ್ನೂ ಕಾಲಾವಕಾಶದ ಅಗತ್ಯತೆ ಇದೆ ಎಂದರು.
ಇದೇ ಸಂದರ್ಭ ಒಳಚರಂಡಿ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ರಂಜನ್ ಆದಷ್ಟು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.