ಕುಶಾಲನಗರ, ಜೂ.೩೦: ಪ್ರಕೃತಿ ಸಂರಕ್ಷಣೆಗೆ ಪೂರಕವಾಗಿ ಮಾಡುವುದರ ಜೊತೆಗೆ ಗಿಡ ಮರಗಳನ್ನು ನೆಟ್ಟು ಬೆಳೆಸುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರೋಹಿತ್ ತಿಳಿಸಿದರು.

ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಅರಣ್ಯ ಇಲಾಖೆ ಪಟ್ಟಣ ಪಂಚಾಯಿತಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಸಹಯೋಗ ದೊಂದಿಗೆ ನಡೆದ ನದಿ ತಟ ಸ್ವಚ್ಛತೆ ಮತ್ತುಗಿಡ ನಾಟಿಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯೋಜನೆ ಆಶ್ರಯದಲ್ಲಿ ಪ್ರತಿ ವರ್ಷ ರಾಜ್ಯದ ಎಲ್ಲೆಡೆ ಲಕ್ಷ ಸಂಖೈಯಲ್ಲಿ ಗಿಡನೆಟ್ಟು ಬೆಳೆಸುವ ಕಾರ್ಯ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕುಶಾಲನಗರ ಪಟ್ಟಣ ಪಂಚಾಯಿತಿ ಪ್ರಭಾರ ಮುಖ್ಯ ಅಧಿಕಾರಿ ಉದಯಕುಮಾರ್ ಮಾತನಾಡಿ, ಕುಶಾಲನಗರ ಪಟ್ಟಣವನ್ನು ಹಸಿರೀಕರಣಗೊಳಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡ್ನಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯುತ್ತಿದೆ ಎಂದರು.ಉತ್ತಮ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ ಮಾಡುವುದರೊಂದಿಗೆ ಗಿಡಗಳನ್ನು ನೆಡಲಾಯಿತು.ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಪೂರ್ಣಿಮ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಸೋಮಶೇಖರ್, ಯೋಜನೆಯ ಸೇವಾಪ್ರತಿನಿಧಿಗಳು, ಶೌರ್ಯ ವಿಪತ್ತು ನಿರ್ವಹಣಾ ಸ್ವಯಂ ಸೇವಕರು ಪಾಲ್ಗೊಂಡಿದ್ದರು.