ಕೂಡಿಗೆ, ಜು. ೧: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಮಾಸಿಕ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿಯಲ್ಲಿ ಸಮರ್ಪಕ ಸಿಬ್ಬಂದಿಗಳು ಇಲ್ಲದೆ ಕಚೇರಿ ಕೆಲಸಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಅನಾನುಕೂಲ ವಾಗುತ್ತಿದೆ. ಅಲ್ಲದೆ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಕಾರ್ಯದರ್ಶಿಯನ್ನು ತಾಲೂಕು ಪಂಚಾಯಿತಿಗೆ ನಿಯೋಜನೆ ಮಾಡಿಕೊಂಡಿರುವುದು ಸರಿಯಾದ ಕ್ರಮವಲ್ಲ. ತಕ್ಷಣವೇ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡುವಂತೆ ಸರ್ವ ಸದಸ್ಯರು ಒತ್ತಾಯಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಗೆ ಹೆಚ್ಚಿನ ಅದ್ಯತೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸ್ವಚ್ಛತೆಗೆ ಅನುದಾನವನ್ನು ಕಾಯ್ದಿರಿಸಿ ಕಾರ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಸದಸ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕಾವೇರಿ ತಟ ರಸ್ತೆಯ ಬದಿಯಲ್ಲಿ ಕಸ ಬಿಸಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸುವಂತೆ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು. ಅದಕ್ಕೆ ಪೂರಕವಾಗಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಮಾಹಿತಿ ನೀಡಿ, ಈಗಾಗಲೇ ಹೊಳೆ ರಸ್ತೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಿದರು. ವಸತಿ ಯೋಜನೆ ಸಂಬAಧಿಸಿದAತೆ ಫಲಾನುಭವಿಗಳ ಆಯ್ಕೆ ಮಾಡಿರುವ ಬಗ್ಗೆ ಸೇರಿದಂತೆ ಅನೇಕ ಅಭಿವೃದ್ಧಿಯ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.

ಈ ಸಂದರ್ಭ ೧೫ನೇ ಹಣಕಾಸು ಯೋಜನೆಗಳ ಅನುಮೋದನೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಚರ್ಚೆಗಳು ನಡೆದವು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ನಂತರ ಸಾರ್ವಜನಿಕರಿಂದ ಅರ್ಜಿಗಳ ಬಗ್ಗೆ ಚರ್ಚೆಗಳು ನಡೆದವು.

ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.