ವೀರಾಜಪೇಟೆ, ಜೂ. ೩೦: ಓಬಿಸಿ ವಿದ್ಯಾರ್ಥಿಗಳ ಏಳಿಗೆಗಾಗಿ ಸರಕಾರದ ವತಿಯಿಂದ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಳ್ಳ ಬೇಕೆಂದು ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ವಿಷ್ಣು ಪರಮಶಿವ ಹೇಳಿದರು.
ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಓಬಿಸಿ ಸಮಿತಿಯ ವತಿಯಿಂದ ಓಬಿಸಿ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಷ್ಣು ಪರಮಶಿವ, ಉನ್ನತ ರೀತಿಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸರಕಾರದಿಂದ ಹಲವಾರು ಸೌಲಭ್ಯಗಳು ದೊರಕುತ್ತವೆ.
ಎಲ್ಲಾ ವಿದ್ಯಾರ್ಥಿಗಳು ಸೌಲಭ್ಯಗಳ ಮಾಹಿತಿ ಅರಿತುಕೊಳ್ಳ ಬೇಕು. ಅಂತೆಯೇ ಉನ್ನತ ವ್ಯಾಸಂಗದೆಡೆಗೆ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರವiಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕಾಫಿ ಬೋರ್ಡ್ನ ಮಾಜಿ ಉಪಾಧ್ಯಕ್ಷರು, ವಕೀಲರೂ ಆದ ರೀನಾ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು. ಉತ್ತಮ ಪ್ರಜೆಗಳಾಗಿ ದೇಶವನ್ನು ಉನ್ನತಿಯೆಡೆಗೆ ಕೊಂಡೊಯ್ಯಬೇಕು. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾ ಸಮಾಜದ ಮುಖ್ಯವಾಹಿನಿಗೆ ಬರುವಂತಾಗ ಬೇಕು. ಉನ್ನತ ಶಿಕ್ಷಣ ಪಡೆದಲ್ಲಿ ಸರಕಾರದ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು. ಹಿಂದುಳಿದ ವಿದ್ಯಾರ್ಥಿಗಳಿಗಿರುವ ವಿದ್ಯಾರ್ಥಿವೇತನದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಅವರು, ಓಬಿಸಿ ವಿದ್ಯಾರ್ಥಿಗಳು ಸ್ವಪ್ರೇರಣೆಯಿಂದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕ ವೇಣುಗೋಪಾಲ್, ಕಾರ್ಯಕ್ರಮದ ಸಂಚಾಲಕ ಕೆ.ಎಸ್. ಕಾರ್ಯಪ್ಪ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.