ಮಡಿಕೇರಿ, ಜು. ೮: ೨೦೧೮-೧೯ನೇ ಸಾಲಿನಲ್ಲಿ ಭೂ ಒಡೆತನ ಯೋಜನೆ ಅಡಿಯಲ್ಲಿ ಜಮೀನು ಖರೀದಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ ಮಂಜೂರು ಮಾಡುವಂತೆ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಪದಾಧಿಕಾರಿಗಳು ಬೇಡಿಕೆಯ ಈಡೇರಿಕೆಗಾಗಿ ಒತ್ತಾಯಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಜೆ.ಆರ್. ಪಾಲಾಕ್ಷ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಅರ್ಹ ಫಲಾನುಭವಿಗಳ ಅರ್ಜಿ ವಿಲೇವಾರಿಯಾಗಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲೂಕು ಅಧ್ಯಕ್ಷ ಜೆ.ಎಲ್. ಜನಾರ್ಧನ ಮಾತನಾಡಿ, ಭೂ ಒಡೆತನ ಯೋಜನೆಯಡಿ ಭೂಮಿ ಮಾರಾಟ ಮಾಡಲು ಮುಂದೆ ಬಂದಿರುವವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇಲ್ಲದೆ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ ಸಂಬAಧಿಸಿದ ಎಲ್ಲಾ ದಾಖಲೆಗಳನ್ನು ನಿಗಮಕ್ಕೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಅರ್ಜಿಯನ್ನು ಪರಿಗಣಿಸಿಲ್ಲವೆಂದು ಆರೋಪಿಸಿದರು. ಫಲಾನುಭವಿಗಳ ಹಿತದೃಷ್ಟಿಯಿಂದ ಅರ್ಜಿಯನ್ನು ಪರಿಗಣಿಸಿ ಪರಿಶಿಷ್ಟ ಜಾತಿ ಮಹಿಳೆಯರಿಗೆ ಭೂ ಒಡೆತನ ಯೋಜನೆಯಡಿ ಜಮೀನು ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯ ನೀಡಬೇಕೆಂದು ಒತ್ತಾಯಿಸಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ವೀರೇಂದ್ರ, ಪ್ರಧಾನ ಕಾರ್ಯದರ್ಶಿ ವಿ. ಸಂದೀಪ್ ಹಾಗೂ ಸದಸ್ಯ ಡಿ.ಕೆ. ಕೆಂಚಪ್ಪ ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.