ಮಡಿಕೇರಿ, ಜು. ೧೦: ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಒತ್ತಾಯಿಸಿ ತಾ. ೧೧ ರಂದು (ಇಂದು) ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಬಿಎಸ್ಪಿ ಜಿಲ್ಲಾಧ್ಯಕ್ಷ ಸಿದ್ದಪ್ಪ ಹಾಗೂ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್, ಕರ್ನಾಟಕದಲ್ಲಿನ ಎಸ್ಸಿ-ಎಸ್ಟಿ ಜನಾಂಗಗಳ (೧೦೧ ಪರಿಶಿಷ್ಟ ಜಾತಿಗಳ ಮತ್ತು ೫೦ ಪರಿಶಿಷ್ಟ ಪಂಗಡಗಳ) ಶಿಕ್ಷಣ ಮತ್ತು ಸಾರ್ವಜನಿಕ ಉದ್ಯೋಗ ಕ್ಷೇತ್ರಗಳಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗಳ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿಯನ್ನು ಸರಕಾರ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ತಾ. ೧೧ ರಂದು ಮಧ್ಯಾಹ್ನ ೧೨.೩೦ ರಿಂದ ೨ ಗಂಟೆಯವರೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಏಕಕಾಲಕ್ಕೆ ಪ್ರತಿಭಟನೆ ನಡೆಯುತ್ತಿದೆ. ಮಡಿಕೇರಿಯಲ್ಲೂ ಪ್ರತಿಭಟನೆ ನಡೆಸಿ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಸಿದ್ದಪ್ಪ ಹಾಗೂ ಅಶೋಕ್ ತಿಳಿಸಿದ್ದಾರೆ.