ಮಡಿಕೇರಿ, ಜು.೧೩: ತಾಲೂಕಿನ ಸಂಪಾಜೆ ಹೋಬಳಿ ಕೊಯನಾಡು ಇಲ್ಲಿ ಕಿಂಡಿ ಅಣೆಕಟ್ಟಿನಲ್ಲಿ ಹೆಚ್ಚಿನ ನೀರಿನ ಹರಿವಿನಿಂದಾಗಿ ೪ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಶ್ರೀ ಗಣಪತಿ ದೇವಸ್ಥಾನದ ಕಲಾಮಂದಿರದ ಸಭಾಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ.
ಪ್ರತಿದಿನ ಅಗತ್ಯ ಮೂಲಭೂತ ಸೌಕರ್ಯಗಳು ಹಾಗೂ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸ್ತುತ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರದಲ್ಲಿ ಇದ್ದ ಸಂತ್ರಸ್ತರು ತಮ್ಮ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಮನೆಗಳಿಗೆ ತೆರಳುವುದಾಗಿ ತಿಳಿಸಿದ ಮೇರೆಗೆ, ಸಂಪಾಜೆ ಹೋಬಳಿಯ ನೋಡಲ್ ಅಧಿಕಾರಿಗಳು ಹಾಗೂ ಕಂದಾಯ ಪರಿವೀಕ್ಷಕರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದು ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಪರವಾಗಿ ಅವರವರ ಮನೆಗಳಿಗೆ ಕಳುಹಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಪಿ.ಎಸ್.ಮಹೇಶ್ ತಿಳಿಸಿದ್ದಾರೆ.