ಸೋಮವಾರಪೇಟೆ, ಜು. ೧೪: ಮಹಿಳೆಯರ ಆರೋಗ್ಯ ಸುಧಾರಣೆಗಾಗಿ ಹೊಗೆಮುಕ್ತ ಅಡುಗೆ ಮನೆ ನಿರ್ಮಾಣದ ಗುರಿಯೊಂದಿಗೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದ್ದು, ಮಹಿಳೆಯರು ಅಡುಗೆ ಅನಿಲ ಸುರಕ್ಷತೆಯ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಕಿವಿಮಾತು ಹೇಳಿದರು.

ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಪಟ್ಟಣ ವ್ಯಾಪ್ತಿಯ ೪೪ ಮಂದಿಗೆ ತಮ್ಮ ಕಚೇರಿಯಲ್ಲಿ ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್ ಮತ್ತು ಸ್ಟೌಗಳನ್ನು ವಿತರಿಸಿ ಮಾತನಾಡಿದ ಶಾಸಕರು, ದೇಶಾದ್ಯಂತ ೭ ಕೋಟಿ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಮೂಲಕ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದೆ. ಬಡವರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ಸರ್ಕಾರ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.

ಕೊರೊನಾದಿAದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭವೂ ಸರ್ಕಾರಗಳು ಜನಸಾಮಾನ್ಯರ ಹಿತಕ್ಕಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿವೆ. ಮಹಿಳೆಯರು ಅಡುಗೆ ಮನೆಯಲ್ಲಿ ಸೌದೆ ಒಲೆಯಿಂದಾಗಿ ಆರೋಗ್ಯ ಕೆಡಿಸಿಕೊಳ್ಳುತ್ತಿದ್ದುದನ್ನು ಮನಗಂಡು ಮೋದಿ ಸರ್ಕಾರ ಉಚಿತವಾಗಿ ಎಲ್ಲಾ ಬಡ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ನೀಡಿದೆ. ಇದನ್ನು ಮನೆಗಳಲ್ಲಿ ಬಳಕೆ ಮಾಡುವ ಬಗ್ಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಜಾಗೃತಿ ವಹಿಸಬೇಕೆಂದು ಶಾಸಕರು ಮನವಿ ಮಾಡಿದರು.

ಈ ಸಂದರ್ಭ ಗಜಾನನ ಗ್ಯಾಸ್ ಏಜೆನ್ಸಿಯ ಮಾಲೀಕರಾದ ಪಿ.ಕೆ. ರವಿ ಉಪಸ್ಥಿತರಿದ್ದು, ಅಡುಗೆ ಅನಿಲ ಸುರಕ್ಷತೆಯ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಿದರು.