ಮಡಿಕೇರಿ, ಜು. ೧೭: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಇದರಿಂದ ದೇಶಕ್ಕೆ ಮತ್ತು ಸಮಾಜಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ರಾಜ್ಯ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಸಲಹೆಯಿತ್ತರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ೨೦೨೦-೨೧ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಲ್ಯಾಪ್ಟಾಪ್ ವಿತರಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಮೇಲೆತ್ತುವ ನಿಟ್ಟಿನಲ್ಲಿ ಲ್ಯಾಪ್ಟಾಪ್ ವಿತರಣೆ ಮತ್ತಿತರ ಪ್ರೋತ್ಸಾಹ ದಾಯಕ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತಾಗ ಬೇಕು ಎಂದು ಅವರು ಸಲಹೆ ಮಾಡಿದರು.
ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು, ಮೊರಾರ್ಜಿ ದೇಸಾಯಿ, ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ ಹೀಗೆ ಹಲವು ವಸತಿ ಶಾಲೆಗಳನ್ನು ಸರ್ಕಾರ ಆರಂಭಿಸಿ ಎಲ್ಲಾ ಬಡ ವಿದ್ಯಾರ್ಥಿ ಗಳಿಗೆ ಶಿಕ್ಷಣ ನೀಡಲು ಮುಂದಾಗಿದೆ. ಆ ನಿಟ್ಟಿನಲ್ಲಿ ಇವುಗಳನ್ನು ಬಳಸಿಕೊಳ್ಳಬೇಕು ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು ಮಾತನಾಡಿ, ಸರ್ಕಾರಿ ಪದವಿಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಪಡೆದ ಪರಿಶಿಷ್ಟ ಜಾತಿಯ ತಲಾ ಐವರಿಗೆ ಮತ್ತು ಪರಿಶಿಷ್ಟ ಪಂಗಡದ ತಲಾ ಮೂವರಿಗೆ ಒಟ್ಟು ೨೪ ಮಂದಿಗೆ ಲ್ಯಾಪ್ಟಾಪ್ ನೀಡಲಾಗುತ್ತದೆ ಎಂದರು.
ವಿದ್ಯಾರ್ಥಿಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದೇವೆ ಎಂಬ ಹಿಂಜರಿಕೆ ಇರಬಾರದು. ಸರ್ಕಾರಿ ಶಾಲೆಯಲ್ಲಿ ಕಲಿತವರು ಸಹ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಆಲೂರು-ಸಿದ್ದಾಪುರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ. ವಿಜಯ ಮಾತನಾಡಿ, ಲ್ಯಾಪ್ಟಾಪ್ ದೊರೆಯುತ್ತಿರುವುದು ತುಂಬಾ ಖುಷಿ ತಂದಿದೆ.
ಪದವಿ ವ್ಯಾಸಂಗದ ಸಂದರ್ಭದಲ್ಲಿ ಹಾಗೂ ಪದವಿ ಪ್ರವೇಶಕ್ಕೆ ಕಾಲೇಜಿನ ಉಪನ್ಯಾಸಕರೊಬ್ಬರು ಆರ್ಥಿಕ ಸಹಕಾರ ನೀಡಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ ಮಾತನಾಡಿದರು. ಕುಶಾಲನಗರದ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ಇತರರು ಇದ್ದರು.
ಉಪನ್ಯಾಸಕ ಚಿದಾನಂದ ಅವರು ಲ್ಯಾಪ್ಟಾಪ್ ಪಡೆದ ವಿದ್ಯಾರ್ಥಿಗಳ ಹೆಸರು ಓದಿದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರವೀಶ್ ಅವರು ನಿರೂಪಿಸಿದರು. ವಿಜಯ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಉಪನ್ಯಾಸಕ ಸಿದ್ದರಾಜು ಬೆಳ್ಳಯ್ಯ ವಂದಿಸಿದರು.