ಪೊನ್ನಂಪೇಟೆ, ಜು. ೧೭: ವಿಶ್ವ ಯುವ ಕೌಶಲ್ಯ ದಿನಾಚರಣೆಯ ಅಂಗವಾಗಿ ರಾಜ್ಯ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಸ್ಕಿಲ್ಲಥಾನ್ -೨೦೨೨ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಹಳ್ಳಿಗಟ್ಟು ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಗೌತಮ್ ಕೃಷ್ಣ ವಿಜಯನ್, ಪಿ.ಎಂ. ಕಾರ್ತಿಕ್, ಬಿ.ಡಿ. ಭರತ್ ಕುಮಾರ್ ಮತ್ತು ಎಂ.ಕೆ. ಡೀನಾ ಕಿರಣ್ ತಂಡ ಸ್ಪರ್ಧೆಯಲ್ಲಿ ಭಾಗವಹಿಸಿ ಯೋಜನೆಯನ್ನು ತಯಾರಿಸಿದ ಹಿನ್ನೆಲೆ ಪ್ರಶಸ್ತಿಯೊಂದಿಗೆ ೨೦ ಸಾವಿರ ರೂಪಾಯಿ ನಗದು ಬಹುಮಾನ ಪಡೆದುಕೊಂಡಿದ್ದಾರೆ. ಇವರಿಗೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ವಿತರಿಸಿ ಅಭಿನಂದಿಸಿದ್ದಾರೆ.