ಮಡಿಕೇರಿ, ಜು. ೧೭: ಕೊಡಗಿನ ಕುಲದೇವಿ ಕಾವೇರಿ ಹಾಗೂ ಕೊಡವ ಮಹಿಳೆಯರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಬಂಧಿಸಿದ ಕೊಡಗು ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯವೆಂದು ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಸಂಘಟನೆಗಳ ಮನವಿಗೆ ತಕ್ಷಣ ಸ್ಪಂದಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆದ್ದರಿಂದ ವಿರಾಜಪೇಟೆಯಲ್ಲಿ ತಾ. ೧೮ ರಂದು (ಇಂದು) ನಡೆಸಲುದ್ದೇಶಿಸಿದ್ದ ಪ್ರತಿಭಟನೆಯನ್ನು ಕೈಬಿಟ್ಟಿರುವುದಾಗಿ ಹೇಳಿದ್ದಾರೆ.

ಯಾರೇ ಆಗಿರಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು. ಬಂಧಿಸಲ್ಪಟ್ಟಿರುವ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸುರೇಶ್ ಮುತ್ತಪ್ಪ ಒತ್ತಾಯಿಸಿದ್ದಾರೆ.