ಸೋಮವಾರಪೇಟೆ, ಜು. ೨೨: ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಮೇಲೆ ಅವೈಜ್ಞಾನಿಕವಾಗಿ ಜಿಎಸ್‌ಟಿ ವಿಧಿಸಿ ಜನಸಾಮಾನ್ಯರನ್ನು ಶೋಷಿಸುತ್ತಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಲ್ಲಿನ ಪುಟ್ಟಪ್ಪ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದೇಶದಲ್ಲಿ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆಯಿಂದಾಗಿ ಬಡವರು ತೊಂದರೆಗೆ ಸಿಲುಕಿದ್ದಾರೆ. ಸರ್ಕಾರ ದೇಶದ ಶ್ರೀಮಂತರಿಗೆ ಮಾತ್ರ ಸೌಲಭ್ಯ ಒದಗಿಸಿ ಅವರುಗಳನ್ನು ಇನ್ನಷ್ಟು ಶ್ರೀಮಂತರನ್ನಾಗಿಸುತ್ತಿದೆ. ಬಡವರ ಬದುಕು ದುಸ್ತರವಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

ತಕ್ಷಣ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ತೆಗೆದುಹಾಕಬೇಕು. ಜನಸಾಮಾನ್ಯರ ಜೀವನವನ್ನು ಸುಗಮಗೊಳಿಸಬೇಕು. ತಪ್ಪಿದಲ್ಲಿ ಎಸ್‌ಡಿಪಿಐ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಸಮಿತಿ ಸದಸ್ಯ ಕಬೀರ್ ಎಚ್ಚರಿಸಿದರು.

ಎಸ್‌ಡಿಪಿಐ ಸೋಮವಾರಪೇಟೆ ನಗರ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಕ್ಷದ ನಗರಾಧ್ಯಕ್ಷ ಬಶೀರ್, ಕಾರ್ಯದರ್ಶಿ ಇಮ್ರಾನ್, ಐಗೂರು ಗ್ರಾ.ಪಂ. ಸದಸ್ಯ ಜುನೈದ್, ಪಿಎಫ್‌ಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ಸೇರಿದಂತೆ ಇತರರು ಭಾಗವಹಿಸಿದ್ದರು.