ಕುಶಾಲನಗರ, ಜು.೨೭: ಕುಶಾಲನಗರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ೨೦೨೧-೨೨ನೇ ಸಾಲಿನಲ್ಲಿ ಕುಶಾಲನಗರ ಸರಕಾರಿ ಪ್ರೌಢಶಾಲೆಯ ೧೦ನೇ ತರಗತಿಯಲ್ಲಿ ಅತಿ ಹೆಚ್ಚು ಫಲಿತಾಂಶ ಗಳಿಸಲು ಕಾರಣಕರ್ತರಾದ ಶಾಲೆಯ ಶಿಕ್ಷಕ ವೃಂದ ಹಾಗೂ ಪ್ರತಿಭಾನ್ವಿತ ೬ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಂಗ್ರೆಸ್ ಯುವ ಮುಖಂಡ ಡಾ.ಮಂಥರ್ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಸುಶಿಕ್ಷಿತರಾಗಿ ಸಾಮಾಜಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಂಡು ಸಮಾನತೆ ಸಾಧಿಸಲು ತಮ್ಮ ಜವಾಬ್ದಾರಿ ನಿರ್ವಹಿಸಬೇಕಿದೆ. ಸಂಘ-ಸAಸ್ಥೆಗಳು, ದಾನಿಗಳು, ಅಧಿಕಾರಿ ವರ್ಗ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ನೆರವಿಗೆ ನಿಂತು ಶಿಕ್ಷಣಕ್ಕೆ ಸಹಕಾರ ನೀಡಬೇಕಿದೆ ಎಂದು ಕರೆ ನೀಡಿದರು.
ತಾಲೂಕು ಸಮಿತಿ ಅಧ್ಯಕ್ಷ ಎಚ್.ಡಿ.ಚಂದ್ರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣವಾಗುತ್ತಿರುವುದು ದುರಂತದ ಸಂಗತಿಯಾಗಿದೆ. ಪೋಷಕರ ಒತ್ತಡದಿಂದ ವಿದ್ಯಾರ್ಥಿಗಳು ಕೇವಲ ಅಂಕಗಳ ಪೈಪೋಟಿಗೆ ಮಾತ್ರ ಸೀಮಿತವಾಗುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿ ಶಿಕ್ಷಕರು, ಪೋಷಕರು ಸಾಮಾಜಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಜಾಗೃತರಾಗಬೇಕಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗೆ ಪೂರಕವಾದ ಪುಸ್ತಕಗಳನ್ನು ಹೆಚ್ಚು ಅಭ್ಯಸಿಸಬೇಕಿದೆ ಎಂದರು.
ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕುಶಾಲನಗರ ಪ.ಪಂ. ಸದಸ್ಯ ದಿನೇಶ್, ಶಾಲಾ ಮುಖ್ಯೋಪಾಧ್ಯಾಯ ಪರಮೇಶ್ವರಪ್ಪ, ನಿವೃತ್ತ ತೋಟಗಾರಿಕಾ ಸಹಾಯಕ ಅಧಿಕಾರಿ ಹೆಚ್.ಬಿ.ಗಣೇಶ್, ಡಿ.ಎಸ್.ಎಸ್. ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಸಂಘಟನಾ ಸಂಚಾಲಕ ಎಂ.ಪಿ.ಶಿವಪ್ಪ, ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಪಲ್ಲೇದ್, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್, ಕಾರ್ಯದರ್ಶಿ ಆದಂ, ಟಿ.ಆರ್.ಸತೀಶ್, ಶಿಕ್ಷಕ ಉ.ರಾ. ನಾಗೇಶ್, ಮಹೇಂದ್ರ ಇದ್ದರು. ವಿದ್ಯಾರ್ಥಿ ತೃಪ್ತಿ ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ನಿರೂಪಿಸಿದರು.