ಕುಶಾಲನಗರ, ಜು. ೨೮: ಕರ್ನಾಟಕ ಜನನ ಮತ್ತು ಮರಣ ನೋಂದಣಿ ಕಾಯ್ದೆ ನಿಯಮಾವಳಿ ತಿದ್ದುಪಡಿ ಮಾಡಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಕುಶಾಲನಗರ ತಾಲೂಕು ವಕೀಲರ ಸಂಘದ ಸದಸ್ಯರು ಮೆರವಣಿಗೆಯಲ್ಲಿ ತೆರಳಿ, ತಾಲೂಕು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಅವರ ನೇತೃತ್ವದಲ್ಲಿ ತೆರಳಿದ ಸದಸ್ಯರು ಪಟ್ಟಣದಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಸಾಗಿ ಮನವಿ ಪತ್ರ ಸಲ್ಲಿಸಿದರು.
ಸರ್ಕಾರದ ಅಧಿಸೂಚನೆಯನ್ನು ವಾಪಸು ಪಡೆದು ಯಥಾಸ್ಥಿತಿಯನ್ನು ಕಾಪಾಡುವಂತೆ ಮರು ಸುತ್ತೋಲೆಯನ್ನು ಹೊರಡಿಸುವಂತೆ ಮನವಿ ಪತ್ರದಲ್ಲಿ ಕೋರಿದ್ದಾರೆ.
ಕರ್ನಾಟಕ ಜನನ ಮತ್ತು ಮರಣ ನೋಂದಾವಣಿಯ ಕ್ಷೇತ್ರ ವ್ಯಾಪ್ತಿಯನ್ನು ಇದೀಗ ಉಪ ವಿಭಾಗಾಧಿಕಾರಿಗಳ ವ್ಯಾಪ್ತಿಗೆ ಒಳಪಡಿಸಿ ಸರ್ಕಾರ ಆದೇಶ ಹೊರಡಿಸಿರುವುದರಿಂದ ನಾಗರಿಕರಿಗೆ ಮತ್ತು ವಕೀಲ ಸಮುದಾಯಕ್ಕೆ ತೀವ್ರ ರೀತಿಯ ತೊಂದರೆ ಉಂಟಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ತಿಳಿಸಿದ್ದಾರೆ. ಈ ಸಂದರ್ಭ ಸಂಘದ ಉಪಾಧ್ಯಕ್ಷ ಕೆ.ಎಸ್. ವೆಂಕಟರಮಣರಾವ್, ಕಾರ್ಯದರ್ಶಿ ಹೆಚ್.ಬಿ. ಮೋಹನ್, ಖಜಾಂಚಿ ಮಂಜುನಾಥ್ ಮತ್ತಿತರರು ಇದ್ದರು.