ಮಡಿಕೇರಿ, ಜು. ೩೦: ದಲಿತರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಆಗಸ್ಟ್ ೧೪ರ ಮಧ್ಯರಾತ್ರಿ ನಗರದ ಗಾಂಧಿ ಮೈದಾನದಲ್ಲಿರುವ ಗಾಂಧಿ ಮಂಟಪದ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಪ್ರತಿಭಟನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ನಮ್ಮ ಸಮಸ್ಯೆಯನ್ನು ಆಲಿಸುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ವಿವರಿಸಿದರು.

ಬೇಡಿಕೆಗಳು

ದಲಿತ ಅಧಿಕಾರಿಗಳು ಜಿಲ್ಲೆಯಲ್ಲಿ ನಿರ್ಭಯವಾಗಿ ಕೆಲಸ ಮಾಡಲು ಸೂಕ್ತ ಅವಕಾಶ ನೀಡಬೇಕು. ಜಿಲ್ಲೆಯಲ್ಲಿ ಅಂಬೇಡ್ಕರ್ ಭವನ ಮತ್ತು ಪ್ರತಿಮೆ ನಿರ್ಮಾಣ ವಾಗಬೇಕು. ಸರ್ಕಾರದ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ದಲಿತರನ್ನು ಆಯ್ಕೆ ಮಾಡಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಹೆಚ್ಚಿಸಬೇಕು. ದಲಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿ ಲಾಗುವುದು ಎಂದು ತಿಳಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ, ಜಿಲ್ಲೆಯಲ್ಲಿ ದೌರ್ಜನ್ಯ ಹೆಚ್ಚಲು ದಲಿತ ಪ್ರತಿನಿಧಿ ಇಲ್ಲದಿರುವುದು ಕಾರಣವಾಗಿದೆ. ಇರುವ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬರಲು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ರಾಜಕೀಯ ಒತ್ತಡದಿಂದ ನೌಕರರಿಗೆ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ವೀರಾಜಪೇಟೆ ತಾಲೂಕು ಸಂಚಾಲಕ ಹೆಚ್.ಎಸ್. ಗಣೇಶ್, ಮಡಿಕೇರಿ ನಗರ ಸಂಚಾಲಕ ಸಿದ್ದೇಶ್ವರ ಇದ್ದರು.