ಕುಶಾಲನಗರ, ಜು.೩೧: ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ವೀರಶೈವ - ಲಿಂಗಾಯುತ ಸಮುದಾಯವನ್ನು ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ವತಿಯಿಂದ ತಾ.೧ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಳೆದ ೬೦ ವರ್ಷಗಳಿಂದ ವೀರಶೈವ-ಲಿಂಗಾಯತ ಸಮುದಾಯವು ರಾಜ್ಯದ ಇತರೇ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿದ್ದರೂ ಈ ವರ್ಗವನ್ನು ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಗೆ ಸೇರಿಸದಿರುವ, ಹಿನ್ನೆಲೆಯಲ್ಲಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಐದು ತಾಲೂಕಿನಿಂದ ಸುಮಾರು ೨೦೦ ಮಂದಿ ಸಮುದಾಯ ಬಾಂಧವರು ಮಹಾಸಭಾದ ಗೌರವಾಧ್ಯಕ್ಷ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮತ್ತು ಕಲ್ಲಮಠದ ಮಹಾಂತ ಸ್ವಾಮೀಜಿ, ವೀರಾಜಪೇಟೆ ಅರಮೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ ನಾಗರಾಜು ನೇತೃತ್ವದಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.