ಮಡಿಕೇರಿ, ಜು. ೩೦ : ನಗರದ ಸಂತ ಮೈಕಲರ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಪ್ರೌಢಶಾಲಾ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ೨೦೨೨-೨೩ ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೧೦೦ ರಷ್ಟು ಫಲಿತಾಂಶ ಪಡೆದ ೬೦ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಭಿನಂದನಾ ಪತ್ರ ವಿತರಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮಕ್ಕಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಲು ಕಾರಣರಾದ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ಸೇವಾ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶಾಲೆಗಳಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದ ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಕೂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವು ರಾಜ್ಯ ಮಟ್ಟದಲ್ಲಿ ೫ನೇ ಸ್ಥಾನದೊಳಗೆ ಬರುವಂತೆ ಶಿಕ್ಷಕರು ಶ್ರಮಿಸಬೇಕು ಎಂದರು.

ಡಿಡಿಪಿಐ ವೇದಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸಲು ಶಾಲೆಗಳಲ್ಲಿ ಕೈಗೊಂಡಿರುವ ಶೈಕ್ಷಣಿಕ ಕ್ರಮಗಳ ಬಗ್ಗೆ ವಿವರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಶ್ರೀಶೈಲ ಬೀಳಗಿ, ಕೆ.ವಿ.ಸುರೇಶ್, ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಸಂತ ಮೈಕಲರ ವಿದ್ಯಾಸಂಸ್ಥೆಯ ಕರೆಸ್ಲಾಂಡೆAಟ್ ರೆ.ಫಾದರ್ ನವೀನ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿಗಳಾದ ವನಜಾಕ್ಷಿ, ಪಿ.ಕೆ.ನಳಿನಿ, ಜಿ.ಎಂ.ಹೇಮAತ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮನೋಹರ್ ನಾಯಕ್ ಇದ್ದರು. ಚಿತ್ರಕಲಾ ಶಿಕ್ಷಕ ಉ.ರಾ.ನಾಗೇಶ್ ನಿರ್ವಹಿಸಿದರು. ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.