ಮಡಿಕೇರಿ, ಆ. ೨: ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸಿರುವುದನ್ನು ಖಂಡಿಸಿ ತಾ. ೫ ರಂದು ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.

ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದಿನ ನಿತ್ಯ ಬಳಸುವ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ವಿಧಿಸುವ ಮೂಲಕ ಸರಕಾರ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿದೆ. ಈ ಹಿನ್ನೆಲೆಯಲ್ಲಿ ತಾ. ೫ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವದು ಎಂದು ಗಣೇಶ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಕೊಲೆ ಪ್ರಕರಣಗಳಿಗೆ ಸಂಬAಧಿಸಿದAತೆ ಹಿಂದೂ ಧರ್ಮದ ಯುವಕನಿಗೆ ಮಾತ್ರ ೨೫ ಲಕ್ಷ ಪರಿಹಾರ ಘೋಷಿಸಿ ಅವರ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ. ಆದರೆ ಉಳಿದಿಬ್ಬರು ಅಮಾಯಕರ ಸಾವಿಗೆ ಸಿಎಂ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ ಇದು ಖಂಡನೀಯ. ರಾಜ್ಯದ ಮುಖ್ಯಮಂತ್ರಿಗಳಾಗಿರುವ ಬಸವರಾಜ ಬೊಮ್ಮಾಯಿ ಅವರು ಎಲ್ಲರನ್ನೂ ಸಮಾನವಾಗಿ ಕಾಣಬೇಕಿತ್ತು. ಆದರೆ ಈ ಕೆಲಸವನ್ನು ಸಿಎಂ ಮಾಡದಿರುವುದು ವಿಷಾದನೀಯ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಈ ವಿಚಾರದಲ್ಲಿ ಎಲ್ಲರನ್ನೂ ಭೇಟಿ ಮಾಡಿ ಸಾಂತ್ವನ ಹೇಳುವ ಮೂಲಕ ಬದ್ಧತೆ ಪ್ರದರ್ಶಿಸಿದ್ದಾರೆ. ಇನ್ನಾದರೂ ಬಸವರಾಜ ಬೊಮ್ಮಾಯಿ ಅವರು ಧರ್ಮದ ರಾಜಕಾರಣವನ್ನು ಬದಗಿಟ್ಟು ಕೊಲೆಯಾದ ಇನ್ನಿಬ್ಬರು ಯುವಕರ ಕುಟುಂಬಗಳ ಕಣ್ಣೀರಿಗೂ ಸ್ಪಂದಿಸುವ ಕೆಲಸ ಮಾಡಲಿ ಎಂದು ಗಣೇಶ್ ಒತ್ತಾಯಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಗಣೇಶ್ ಹೇಳಿದರು.

ಸೋಮವಾರಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಸಿ.ಎಸ್. ನಾಗರಾಜು ಮಾತನಾಡಿ, ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ರಾಜ್ಯದಲ್ಲಿ ಆಡಳಿತ ನಡೆಸಲು ಶಕ್ತಿಯಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರನ್ನೂ ಸಮಾನವಾಗಿ ಕಾಣುವಂತಾಗಬೇಕು ಎಂದು ನುಡಿದರು.

ವೀರಾಜಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ, ಬಿಜೆಪಿಯ ಯುವ ಸಮೂಹಕ್ಕೆ ಉದ್ಯೋಗ ಕಲ್ಪಿಸುವ ಬದಲು ಅವರುಗಳನ್ನು ಪ್ರತಿಭಟನೆಗೆ ಬಳಸಿಕೊಳ್ಳುತ್ತಾ ಪ್ರತಿಭಟನೆಯೇ ಒಂದು ಉದ್ಯೋಗ ಎಂಬAತೆ ವರ್ತಿಸುತ್ತಿದೆ ಎಂದು ದೂರಿದರಲ್ಲದೆ, ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಕಳಪೆ ಆಗುತ್ತಿದ್ದು, ಇದರ ವಿರುದ್ಧ ಯುವಕರು, ನಾಗರಿಕರು ಧ್ವನಿ ಎತ್ತಬೇಕೆಂದು ಹೇಳಿದರು.

ಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾ ಖಜಾಂಚಿ ಡೆನ್ನಿ ಬರೋಸ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಪರ್ಮಲೆ ಗಣೇಶ್, ಕುಶಾಲನಗರ ತಾಲೂಕು ಅಧ್ಯಕ್ಷ ಪಿ.ಡಿ. ರವಿ ಉಪಸ್ಥಿತರಿದ್ದರು.