ಚೆಟ್ಟಳ್ಳಿ, ಆ. ೭: ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಕನ್ಯಾಲಗ್ನದಲ್ಲಿ ನಾಡಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸುವ ಗಜಪಡೆಗೆ ಅರಣ್ಯ ಸಚಿವ ಉಮೇಶ್ ಕತ್ತಿ ಮೈಸೂರು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹಾಗೂ ಶಾಸಕ ಹೆಚ್.ಪಿ. ಮಂಜುನಾಥ್ ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.
ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷಿö್ಮÃ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆಹಾಕಿದವು. ಆ.೧೦ರಂದು ಅರಮನೆಗೆ ಗಜಪಡೆಗಳು ತಲುಪಲಿದ್ದು, ಅಂದು ಬೆಳಗ್ಗೆ ೯.೨೦ರಿಂದ ೧೦ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ.
ಈ ವೇಳೆ ವಿಧಾನಪರಿಷತ್ ಸದಸ್ಯರಾದ ವಿಶ್ವನಾಥ್, ಮಂಜೇಗೌಡ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ಎಸ್.ಪಿ. ಚೇತನ್ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.