ಮಡಿಕೇರಿ, ಆ. ೧೧: ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳಲ್ಲಿ ತಾ. ೧೨ ರಿಂದ (ಇಂದಿನಿAದ) ೨೫ ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವುದು, ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು. ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಸಾಮಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧ ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ, ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು ಅಥವಾ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ.

ಒಟ್ಟು ೧,೧೮೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಕಲಾ ವಿಭಾಗದಿಂದ ೬೧೯, ವಾಣಿಜ್ಯ ವಿಭಾಗದ ೬೦೨ ವಿದ್ಯಾರ್ಥಿಗಳು ಹಾಗೂ ೧೬೧ ವಿಜ್ಞಾನ ವಿಭಾಗದಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.