ಕುಶಾಲನಗರ, ಆ.೧೭: ಕುಶಾಲನಗರ ಪಟ್ಟಣದಲ್ಲಿ ತಗ್ಗು ಪ್ರದೇಶಗಳನ್ನು ನಿಯಮಬಾಹಿರವಾಗಿ ಬಡಾವಣೆಗಳಾಗಿ ಪರಿವರ್ತಿಸಿ ಮನೆಗಳನ್ನು ನಿರ್ಮಿಸಿರುವ ಕಾರಣ ಕಳೆದ ಕೆಲವು ವರ್ಷಗಳಿಂದ ನದಿ ತಟಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಲು ಪ್ರಮುಖ ಕಾರಣವಾಗಿದೆ ಎಂದು ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅವರು, ಕುಶಾಲನಗರ ಸಮೀಪದ ಕೊಪ್ಪ ಗ್ರಾಮದಲ್ಲಿ ಪಂಚಾಯಿತಿ ಮೂಲಕ ನಿರ್ಮಿಸಿದ ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಪಟ್ಟಣ ಪಂಚಾಯಿತಿ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧಿಕಾರಿಗಳು ನದಿ ತಟಗಳಲ್ಲಿ ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿಸಲು ಅವಕಾಶ ಕಲ್ಪಿಸಿ ಮನೆ ನಿರ್ಮಾಣಕ್ಕೆ ಅವಕಾಶ ನೀಡಿರುವುದು ಇತ್ತೀಚಿನ ಅನಾಹುತಗಳಿಗೆ ಕಾರಣವಾಗಿದೆ.
ಇಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರಿಗಳು, ಸಾರ್ವಜನಿಕರು ಎಚ್ಚರವಹಿಸಬೇಕು. ತಪ್ಪಿತಸ್ತ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಕೊಪ್ಪ ಗ್ರಾಮ ಅತೀ ಶೀಘ್ರವಾಗಿ ಅಭಿವೃದ್ಧಿಗೊಳ್ಳುತ್ತಿದ್ದು, ಎಲ್ಲಾ ಮೂಲಭೂತ ವ್ಯವಸ್ಥೆಕಲ್ಪಿಸುವ ನಿಟ್ಟಿನಲ್ಲಿ ಪಂಚಾಯಿತಿ ಮೂಲಕ ಪ್ರಸ್ತಾವನೆ ಸಲ್ಲಿಸಬೇಕು ಎಂದರು. ಗ್ರಾಮ ಪಂಚಾಯಿತಿಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದ ಅನುದಾನ ಒದಗಿಸುತ್ತಿದ್ದು, ಇದರ ಸದುಪಯೋಗವಾಗುವಂತೆ ನೋಡಿಕೊಳ್ಳುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪಿರಿಯಾಪಟ್ಟಣ ಕ್ಷೇತ್ರ ಶಾಸಕ ಕೆ.ಮಹದೇವ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಗ್ರಾಮ ಪಂಚಾಯಿತಿ ಅಧ್ಯಕ್ಷ ರೇಣುಕಸ್ವಾಮಿ ವಹಿಸಿದ್ದರು. ಪಂಚಾಯಿತಿ ಉಪಾಧ್ಯಕ್ಷೆ ಸಿಂಧೂ, ಸರ್ವ ಸದಸ್ಯರು, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಹಾಗೂ ಅಭಿವೃದ್ಧಿ ಅಧಿಕಾರಿ ಸತೀಶ್ ಮತ್ತಿತರರು ಇದ್ದರು.