ಗೋಣಿಕೊಪ್ಪಲು, ಆ.೧೭: ಗ್ರಾಮೀಣ ಭಾಗವಾದ ಬಿರುನಾಣಿ ಸುತ್ತಮುತ್ತಲಿನ ರೈತರಿಗೆ ನಿರಂತರ ವಿದ್ಯುತ್ ಸಮಸ್ಯೆ ಕಾಡುತ್ತಿದ್ದು, ಇದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ರೈತ ಸಂಘದ ಮುಖಂಡ ಕರ್ತಮಾಡ ಸುಜು ಪೊನ್ನಪ್ಪ ಸೆಸ್ಕ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದರು.

ಗೋಣಿಕೊಪ್ಪಲುವಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಅಧ್ಯಕ್ಷತೆಯಲ್ಲಿ ಸೆಸ್ಕ್ ಹಿರಿಯ ಅಧಿಕಾರಿಗಳೊಂದಿಗೆ ಬಿರುನಾಣಿ ಭಾಗದ ರೈತರು ಭಾಗವಹಿಸಿದ್ದ ಸಭೆಯಲ್ಲಿ ಮಾತನಾಡಿದ ಸುಜು ಪೊನ್ನಪ್ಪ ಕಳೆದ ಒಂದು ತಿಂಗಳ ಹಿಂದೆ ಬಿರುನಾಣಿ ಭಾಗದಲ್ಲಿ ಸೆಸ್ಕ್ ಹಿರಿಯ ಅಧಿಕಾರಿಗಳೊಂದಿಗೆ ಹಲವಾರು ಬಾರಿ ರೈತರು ಸಭೆ ನಡೆಸಿ ಹಲವು ಮನವಿಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದ್ದರು. ಆದರೆ ರೈತರು ನೀಡಿದ ದೂರನ್ನು ಸರಿಪಡಿಸುವಲ್ಲಿ ಇಲಾಖೆಯು ವಿಳಂಬ ಧೋರಣೆ ಅನುಸರಿಸುತ್ತಿದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಬಿರುನಾಣಿ ಭಾಗದ ರೈತರು, ಸಾರ್ವಜನಿಕರು ಸಭೆ ನಡೆಸುತ್ತಿದ್ದೇವೆ. ಮುಂದೆ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಗೋಣಿಕೊಪ್ಪ ಸೆಸ್ಕ್ ಕಚೇರಿಗೆ ಬೀಗ ಜಡಿಯುವುದಾಗಿ ಹೇಳಿದರು. ಈ ವೇಳೆ ಸಭೆಯಲ್ಲಿದ್ದ ರೈತ ಸಂಘದ ಮುಖಂಡರು ಹಾಗೂ ಸದಸ್ಯರು ಮುಂದಿನ ಒಂದು ತಿಂಗಳೊಳಗೆ ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲು ಸಮ್ಮತಿ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ರೈತರು ಸೆಸ್ಕ್ಗೆ ನಿಗದಿತ ಸಮಯದಲ್ಲಿ ವಿದ್ಯುತ್ ಬಿಲ್ಲನ್ನು ಪಾವತಿ ಮಾಡುತ್ತಿದ್ದರೂ ಕೂಡ ವಿದ್ಯುತ್ ಸಮಸ್ಯೆ ನೀಗುತ್ತಿಲ್ಲ. ಲೋ ವೋಲ್ಟೇಜ್ ಸೇರಿದಂತೆ ಇನ್ನಿತರ ಸಮಸ್ಯೆಗಳು ನಿರಂತರವಾಗಿ ಈ ಭಾಗದ ಜನರನ್ನು ಕಾಡುತ್ತಿದೆ. ಹೀಗಾಗಿ ಹಲವು ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವಲ್ಲಿ ಇಲಾಖೆ ವಿಳಂಬ ಧೋರಣೆ ನಡೆಸುತ್ತಿರುವುದು ಸರಿಯಲ್ಲ ಹೀಗಾಗಿ ಒಂದು ತಿಂಗಳೊಳಗೆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲೇಬೇಕು. ತಪ್ಪಿದಲ್ಲಿ ಮುಂದಿನ ತಿಂಗಳ ೫ರಂದು ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಗೋಣಿಕೊಪ್ಪ ಸೆಸ್ಕ್ನ ಇಇ ನೀಲ್ ಶೆಟ್ಟಿ ಮಾತನಾಡಿ ಇಲಾಖೆಯ ಸಿಬ್ಬಂದಿಗಳು ಈ ಭಾಗದಲ್ಲಿ ನಿರಂತರವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರೈತರ ವಿದ್ಯುತ್ ಸಮಸ್ಯೆ ನಿವಾರಣೆಗೆ ಎಲ್ಲಾ ಪ್ರಯತ್ನಗಳು ಬಿರುಸಿನಿಂದ ಸಾಗುತ್ತಿದೆ. ಈ ಭಾಗಕ್ಕೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಆದಷ್ಟು ಬೇಗನೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪAಡ ಪ್ರವೀಣ್, ಹುದಿಕೇರಿ ಹೋಬಳಿ ಅಧ್ಯಕ್ಷ ಚಂಗುಲAಡ ಸೂರಜ್, ಮಾಯಮುಡಿ ಅಧ್ಯಕ್ಷ ಪುಚ್ಚಿಮಾಡ ರಾಯ್ ಮಾದಪ್ಪ ಸೇರಿದಂತೆ ಬಿರುನಾಣಿ ಭಾಗದ ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.