ಮುಳ್ಳೂರು, ಆ. ೧೯: ಶನಿವಾರಸಂತೆ ಕ್ಲಸ್ಟರ್ ಮಟ್ಟದ ೨೦೨೨-೨೩ನೇ ಸಾಲಿನ ಪ್ರತಿಭಾ ಕಾರಂಜಿ ಕಲಿಕೋತ್ಸವ ಕಾರ್ಯಕ್ರಮ ಇಲ್ಲಿಗೆ ಸಮೀಪದ ಚಿಕ್ಕಕೊಳತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಕಿರಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ನಾನಾ ರೀತಿಯ ಪ್ರತಿಭೆಗಳನ್ನು ಅನಾವರಣ ಗೊಳಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇದಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಯಾವುದೇ ಸಂಕೋಚ, ಕೀಳರಿಮೆ ಇಲ್ಲದೆ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕೆಂದರು.
ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ದಿನೇಶ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಇಲಾಖೆಯ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿದ್ದು, ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅದನ್ನು ಕಲಿಕೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪ್ರದರ್ಶಿಸಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರಕಾರ ಮತ್ತು ಶಿಕ್ಷಣ ಇಲಾಖೆ ಕ್ಲಸ್ಟರ್, ಹೋಬಳಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮವನ್ನು ಪ್ರತಿವರ್ಷ ಶೈಕ್ಷಣಿಕ ಸಾಲಿನಲ್ಲಿ ಆಯೋಜಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘಟನೆಯ ನಿರ್ದೇಶಕ ಸುರೇಶ್ ಮಾತನಾಡಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಗ್ರಾ.ಪಂ. ಸದಸ್ಯರಾದ ಡಿ.ಬಿ. ಬೋಜಪ್ಪ, ಸಿ.ಜೆ. ಗಿರೀಶ್, ಎಸ್.ಪಿ. ಭಾಗ್ಯ, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಶಿಕ್ಷಕಿ ಲಕ್ಷಿö್ಮ ಮುಂತಾದವರು ಹಾಜರಿದ್ದರು.
ಶನಿವಾರಸಂತೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ೧೩ ಶಾಲೆಗಳ ಒಟ್ಟು ೪೫೦ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.