ಮಡಿಕೇರಿ, ಆ. ೧೮ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸುರವರ ೧೦೭ನೇ ಜನ್ಮ ದಿನಾಚರಣೆಯು ತಾ. ೨೦ ರಿಂದ ೨೨ ರವರೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ತಾ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ ಪ್ರಧಾನ ಹಾಗೂ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ.

ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ಎಂ. ರವಿಕಾಳಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ ಇತರರು ಪಾಲ್ಗೊಳ್ಳಲಿದ್ದಾರೆ.

ತಾ. ೨೦ ರಂದು ಕುಲ ಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ, ತಾ. ೨೧ ರಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ತಾ. ೨೨ ರಂದು ವಸತಿ ನಿಲಯ ಮತ್ತು ಶಾಲೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಅರಣ್ಯ ಮಹತ್ವದ ಬಗ್ಗೆ ಅರಿವು ಮೂಡಿಸುವುದು, ಛಾಯಾಚಿತ್ರ ಪ್ರದರ್ಶನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

ತಾ. ೨೦ ರಿಂದ ೨೨ ರವರೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ಕುಲ ಕಸುಬುದಾರರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.