ಗೋಣಿಕೊಪ್ಪಲು, ಆ. ೨೬: ಹುದಿಕೇರಿಯ ಕೊಡವ ಸಮಾಜದಲ್ಲಿ ವೀರಾಜಪೇಟೆ ಬಿಜೆಪಿ ಮಂಡಲದ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹುದಿಕೇರಿ ಭಾಗದ ೨೫ಕ್ಕೂ ಅಧಿಕ ಮಂದಿ ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಕೆ.ಜಿ.ಬೋಪಯ್ಯ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಬೋಪಯ್ಯ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಪಕ್ಷವು ದಿನದಿಂದ ದಿನಕ್ಕೆ ಬಲಿಷ್ಠಗೊಳ್ಳುತ್ತಿದೆ. ಪಕ್ಷದಲ್ಲಿನ ಸಕ್ರೀಯ ಕಾರ್ಯಕರ್ತರ ಶ್ರಮದಿಂದ ಈ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದ ಮೇಲಿರುವ ಅಸಮಾಧಾನವನ್ನು ಹೊರ ಹಾಕಿ ಅಲ್ಲಿದ್ದ ಕಾರ್ಯಕರ್ತರು, ಮುಖಂಡರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಉತ್ತಮವಾಗಿದೆ. ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಪದಾಧಿಕಾರಿಗಳು ಪಕ್ಷದ ಕೆಲಸವನ್ನು ನಿರಂತರವಾಗಿ ಮಾಡುತ್ತಿರುವುದರಿಂದ ಪಕ್ಷ ಸಂಘಟನೆ ಗಟ್ಟಿಯಾಗುತ್ತಿದೆ ಎಂದರು.
ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞಂಗಡ ಅರುಣ್ ಭೀಮಯ್ಯ ಸೇರಿದಂತೆ ಪ್ರಮುಖರು ಹಾಜರಿದ್ದರು. ವೀರಾಜಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟೀರ ಪ್ರವೀಣ್ ಸ್ವಾಗತಿಸಿದರು. ಬೋಪಣ್ಣ ವಂದಿಸಿದರು.